ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಒಂದಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಸಜೀವವಾಗಿ ದಹನಗೊಂಡು, ಹಲವರು ತೀವ್ರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಬಳಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.
ದೆಹಲಿಯಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಜೇವರ್ ಬಳಿಯ ಯಮುನಾ ಎಕ್ಸ್‌ಪ್ರೆಸ್‌ವೇಯ ಕಿಲೋಮೀಟರ್ 33ರ ಬಳಿ ರಾತ್ರಿ ಸುಮಾರು 11:30ರ ವೇಳೆಗೆ ಈ ಭೀಕರ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ !
ಉಳಿದುಕೊಂಡಿರುವ ಪ್ರಯಾಣಿಕರು ನೀಡಿದ ಮಾಹಿತಿಯಂತೆ, ಚಾಲಕನ ಕ್ಯಾಬಿನ್‌ನಿಂದ ಸುಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಪ್ರಯಾಣಿಕರು ಚಾಲಕ ಮತ್ತು ನಿರ್ವಾಹಕರಿಗೆ ತಕ್ಷಣವೇ ಮಾಹಿತಿ ನೀಡಿದ್ದರು. ಆದರೆ, ಅವರು ಇದನ್ನು ಗಂಭೀರವಾಗಿ ಪರಿಗಣಿಸದೆ, ಬಸ್ ನಿಲ್ಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಚಾಲಕನ ಸೀಟಿನ ಬಳಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್‌ಗೆ ವೇಗವಾಗಿ ಹರಡಿತು. ಬಸ್‌ನೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಮತ್ತು ಪ್ರಯಾಣಿಕರು ನಿದ್ರೆಯಲ್ಲಿದ್ದರಿಂದ ತೀವ್ರ ಗೊಂದಲ ಹಾಗೂ ಕಾಲ್ತುಳಿತದ ಸನ್ನಿವೇಶ ನಿರ್ಮಾಣವಾಯಿತು. ಕೆಲವರು ಬಸ್‌ನಿಂದ ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡರೆ, ಇನ್ನು ಕೆಲವರು ಒಳಗಡೆಯೇ ಸಿಲುಕಿ ಬೆಂಕಿಯ ಜ್ವಾಲೆಗೆ ಸಿಲುಕಿದರು.
ಗಾಯಗೊಂಡವರನ್ನು ಜೇವರ್‌ನ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 9 ಮಂದಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಕಂಬನಿ ಮಿಡಿದಿದ್ದಾರೆ. ಗಾಯಾಳುಗಳಿಗೆ ಸೂಕ್ತ ಮತ್ತು ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.




