ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ಗುರುವಾರ ಮುಂಜಾನೆ 17 ವರ್ಷದ ಅಪ್ರಾಪ್ತ ಚಲಾಯಿಸುತ್ತಿದ್ದ ಎಸ್‌ಯುವಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕರೊಬ್ಬರು ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಆತನ ಹಾಗೂ ಎಸ್‌ಯುವಿ ಮಾಲೀಕ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಿರುದ್ಧ ದಿಕ್ಕಿನಿಂದ ಬಂದ ವಾಹನ ಹಾಲು ಮಾರುತ್ತಿದ್ದ ನವೀನ್ ವೈಷ್ಣವ್ ಅವರಿಗೆ ಡಿಕ್ಕಿಯೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ನಂತರ ಆತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ತೀವ್ರವಾಗಿ ಗಾಯಗೊಂಡ ವೈಷ್ಣವ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೇಕೆದಾಟು ಮಧ್ಯಸ್ಥಿಕೆ ವಹಿಸದ ಕೇಂದ್ರ, ದಕ್ಷಿಣದ ರಾಜ್ಯಗಳಿಗಿದು ಸಕಾಲ
ಎಸ್‌ಯುವಿ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ 17 ವರ್ಷದ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಯ ಸಮಯದಲ್ಲಿ ಅಪ್ರಾಪ್ತ ಮದ್ಯ ಸೇವಿಸಿದ್ದನೆ ಎಂದು ನಿರ್ಧರಿಸಲು ಆತನ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಮೇ 19 ರಂದು ಇದೇ ರೀತಿಯ ಘಟನೆ ಪುಣೆಯಲ್ಲಿ ನಡೆದಿದ್ದು ಪೋರ್ಷೆ ಕಾರು ಚಲಾಯಿಸುತ್ತಿದ್ದ 17 ವರ್ಷದ ಚಾಲಕ ಬೈಕ್‌ಗೆ ಡಿಕ್ಕಿಯೊಡೆದ ಪರಿಣಾಮ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು.
