ಅಯೋಧ್ಯೆಯ ರಾಮ ಮಂದಿರದ ದೇಣಿಗೆಯ ದುರ್ಬಳಕೆ ಮತ್ತು ಕಳ್ಳತನದ ಬಗ್ಗೆ ತಮಗೆ ಸಂಪೂರ್ಣ ಮಾಹಿತಿ ಇದೆ, ಆದರೆ ಸದ್ಯಕ್ಕೆ ಅದನ್ನು ಬಹಿರಂಗಪಡಿಸುವ ಸ್ಥಿತಿಯಲ್ಲಿ ತಾನಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.
ವಿಷ್ಣೋಹರ್‌ಪುರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ತಿಳಿದಿರುವ ಸತ್ಯವನ್ನು ಈಗಲೇ ಬಹಿರಂಗಪಡಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾನು ತುಂಬಾ ದುರ್ಬಲ ವ್ಯಕ್ತಿ. ಒಂದು ವೇಳೆ ನಾನು ಈಗ ಸತ್ಯವನ್ನು ಮಾತನಾಡಿದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇನೆ. ಏಕೆಂದರೆ ಅವರು ಅತ್ಯಂತ ಶಕ್ತಿಶಾಲಿಗಳು. ಸದ್ಯಕ್ಕೆ ಸತ್ಯವನ್ನು ಹೇಳುವ ಧೈರ್ಯ ನನಗಿಲ್ಲ. ಸೂಕ್ತ ಸಮಯ ಬಂದಾಗ ನಾನು ಖಂಡಿತ ಮಾತನಾಡುತ್ತೇನೆ” ಎಂದು ಅವರು ಹೇಳಿದ್ದಾರೆ.
ಆದರೆ, ತಾವು ಯಾರನ್ನು ಉದ್ದೇಶಿಸಿ ‘ಶಕ್ತಿಶಾಲಿಗಳು’ ಎಂದು ಹೇಳುತ್ತಿದ್ದಾರೆ ಎಂಬುದನ್ನು ಮಾತ್ರ ಬ್ರಿಜ್ ಭೂಷಣ್ ಬಹಿರಂಗಪಡಿಸಿಲ್ಲ. ಅಯೋಧ್ಯೆಯ ರಾಮಮಂದಿರಕ್ಕೆ ಬಂದಿರುವ ದೇಣಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ ಅವರ ಈ ಹೇಳಿಕೆ ತೀವ್ರ ರಾಜಕೀಯ ಸಂಚಲನ ಮೂಡಿಸಿದೆ.
ದೆಹಲಿಯಲ್ಲಿ 10 ದಿನಗಳ ಕಾಲ ತಂಗಿದ್ದ ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್, ಇತ್ತೀಚೆಗೆ ತಮ್ಮ ಗ್ರಾಮಕ್ಕೆ ಮರಳಿದ್ದು, ಕಳೆದ ಕೆಲವು ವರ್ಷಗಳಿಂದ ತಾವು ಹಲವಾರು ಸವಾಲುಗಳನ್ನು ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ. 2023 ರಲ್ಲಿ ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ಮಾಡಿದ್ದ ಗಂಭೀರ ಲೈಂಗಿಕ ಕಿರುಕುಳದ ಆರೋಪಗಳನ್ನು ಪ್ರಸ್ತಾಪಿಸಿದ ಅವರು, ತಾವು ಸುದೀರ್ಘ ಕಾಲದಿಂದ ಆ ವಿವಾದದ ಪರಿಣಾಮಗಳನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ರಾಮಮಂದಿರ ದೇಣಿಗೆ ನಿಧಿಯಿಂದ ಕೋಟ್ಯಂತರ ರೂಪಾಯಿ ಮಾಯ: ಅಖಿಲೇಶ್ ಯಾದವ್
ಇದೇ ವೇಳೆ, ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ NEET ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಮಾತನಾಡಿರುವ ಬ್ರಿಜ್ ಭೂಷಣ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಒಳಗೊಂಡಿರುವ ಒಂದು ಸಂಘಟಿತ ಜಾಲದ ಕೆಲಸವಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರಿಂದ ಮಾತ್ರ ಇಂತಹ ಪಿಡುಗನ್ನು ತಡೆಯಲು ಸಾಧ್ಯ ಎಂದಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ “ಅಯೋಧ್ಯೆಯ ರಾಮಮಂದಿರದ ದೇಣಿಗೆ ನಿಧಿಯಿಂದ ಕೋಟ್ಯಂತರ ರೂಪಾಯಿ ಕಾಣಿಕೆ ಹಣ ಮಾಯವಾಗಿದೆ” ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಅಖಿಲೇಶ್ ಒತ್ತಾಯಿಸಿದ್ದರು.





