ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ನಿಖರ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.
ಶುಕ್ರವಾರ ಇಡೀ ದಿನ ಮನೆಯ ಬಾಗಿಲು ಮುಚ್ಚಿದಂತೆಯೇ ಇತ್ತು. ಮನೆಯಲ್ಲಿದ್ದ ಯಾರೊಬ್ಬರೂ ಹೊರಗೆ ಸುಳಿದಿರಲಿಲ್ಲ. ಇದನ್ನು ಗಮನಿಸಿದ ನೆರೆಹೊರೆಯವರು ಅನುಮಾನಗೊಂಡು ಮನೆಯ ಬಳಿ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ, ಅವರ ಮೃತದೇಹಗಳು ಪತ್ತೆಯಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತರನ್ನು ಸಂಜೀವ್ ಮೋಹನನ್ (34), ಅವರ ಪತ್ನಿ ರೇಷ್ಮಾ (30) ಹಾಗೂ ಅವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.
ಇಡುಕ್ಕಿಯ ಉಪ್ಪುತರಾದ ಪಟ್ಟತಂಬಲಂ ಪ್ರದೇಶದಲ್ಲಿ ಕುಟುಂಬವು ವಾಸವಾಗಿತ್ತು. ಸಂಜೀವ್ ಅವರು ಆಟೋ ಚಾಲಕರಾಗಿ ದುಡಿಮೆ ಮಾಡುತ್ತಿದ್ದರು. ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು ಎಂದು ಹೇಳಲಾಗಿದೆ.
ಪೋಷಕರು ತಮ್ಮ ಮಕ್ಕಳನ್ನು ಕೊಂದು, ಬಳಿಕ ಅವರೂ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯಗಳಿವೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.