ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ ನಾಯಕರು ಗೈರು ಹಾಜರಾಗುವ ಸಾಧ್ಯತೆಯಿಂದ ಡಿಸೆಂಬರ್ 6 ರಂದು ನವದೆಹಲಿಯಲ್ಲಿ ನಡೆಯಬೇಕಿದ್ದ ಇಂಡಿಯಾ ಸಭೆಯನ್ನು ಮುಂದೂಡಲಾಗಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ವಿಮಾನ ನಿಲ್ದಾಣ ಬಂದ್ ಆಗಿರುವ ಕಾರಣದಿಂದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತಾವು ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ನಿತೀಶ್ ಕುಮಾರ್ ಅವರು ಅನಾರೋಗ್ಯದ ಕಾರಣ ನೀಡಿದ್ದರೆ, ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಅವರು ಬೇರೆ ಕಾರ್ಯಕ್ರಮದ ನಿಮಿತ್ತ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಮೊದಲೇ ತಿಳಿಸಿದ್ದರು.
ಎಲ್ಲ ಪಕ್ಷದ ವಕ್ತಾರರನ್ನು ಸಂಪರ್ಕಿಸಿದ ನಂತರ ಎರಡು ವಾರಗಳ ನಂತರ ಸಭೆಯನ್ನು ಆಯೋಜಿಸಲು ಕಾಂಗ್ರೆಸ್ ಪ್ರಯತ್ನಿಸುತ್ತದೆ.
ಈ ಸುದ್ದಿ ಓದಿದ್ದೀರಾ? ಮಿಜೋರಾಂ | ಡಿಸೆಂಬರ್ 8 ರಂದು ಲಾಲ್ದುಹೋಮಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ
ಶಿವಸೇನೆ (ಯುಬಿಟಿ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸಭೆಯಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ. ಆದರೆ ನಂತರ ಕಾರಣಾಂತರಗಳಿಂದ ವಿಮಾನದ ಟಿಕೆಟ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಆಮ್ ಆದ್ಮಿ ಪಕ್ಷವು ಕಾರ್ಯಕ್ರಮಕ್ಕೆ ಹಾಜರಾಗಲು ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಸಂದೇಶ ಕಳುಹಿಸಿಲ್ಲ.
‘ಇಂಡಿಯಾ’ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದ ದೇಶದ ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟವಾಗಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು ಈ ಒಕ್ಕೂಟವನ್ನು ರಚಿಸಲಾಗಿದೆ. ಜುಲೈ 2023 ರಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಒಕ್ಕೂಟವನ್ನು ರಚಿಸಲಾಯಿತು.