ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಇಂದು ಕೇರಳದ ಆಲಪ್ಪುಳದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಇಂಡಿಯಾ ಒಕ್ಕೂಟದ ನಾಯಕರು ರಾಷ್ಟ್ರಪತಿಗಳನ್ನು ಭೇಟಿಯಾಗಿ ಮುಖ್ಯ ಚುನಾವಣಾ ಆಯುಕ್ತರ ವಿಚಾರ ಹಾಗೂ ಮತಗಳ್ಳತನದ ಆರೋಪಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ವೇಣುಗೋಪಾಲ್, ಈ ನಡೆ ಅವರಿಗೇ ರಾಜಕೀಯವಾಗಿ ಹಿನ್ನಡೆಯಾಗಬಹುದು ಎಂದರು.
ವಿಪಕ್ಷಗಳ ಪ್ರತಿಭಟನೆಗೆ ಪ್ರಧಾನಿ ಹೆದರುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಚುನಾವಣಾ ಪ್ರಕ್ರಿಯೆ ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗುವವರೆಗೆ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ವಿರುದ್ಧ ಕಾಂಗ್ರೆಸ್ ಎಚ್ಚರಿಕೆಯಿಂದ ಮಧ್ಯಪ್ರವೇಶಿಸಿದೆ ಎಂದ ಅವರು, ಚುನಾವಣಾ ಆಯೋಗದ ಲೆಟರ್‌ಹೆಡ್‌ನಲ್ಲಿ ಬಿಜೆಪಿಯ ಚುನಾವಣಾ ಚಿಹ್ನೆ ಕಮಲ ಕಾಣಿಸಿಕೊಂಡಿದ್ದಕ್ಕೆ ಸಂಬಂಧಿಸಿದ ವಿವಾದವನ್ನೂ ಪ್ರಸ್ತಾಪಿಸಿದರು.
ಕೇರಳಕ್ಕೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಂಜೂರು ಮಾಡಲು ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ. ಏಮ್ಸ್ ಸೌಲಭ್ಯವನ್ನು ನೀಡದಿರಲು ಕೇಂದ್ರ ಸರ್ಕಾರ ಮುಂದಿಟ್ಟಿರುವ ಕಾರಣಗಳು ಸಮರ್ಥನೀಯವಲ್ಲ. ಬಿಜೆಪಿಯ ರಾಜಕೀಯ ಕಾರ್ಯಸೂಚಿಯಲ್ಲಿ ಕೇರಳಕ್ಕೆ ಸ್ಥಾನವಿಲ್ಲ. ಹಾಗಾಗಿ ಬಿಜೆಪಿ ಪಕ್ಷದ ರಾಜ್ಯ ಘಟಕವನ್ನು ವಿಸರ್ಜಿಸುವುದೇ ಸೂಕ್ತ. ಮುಂದಿನ ಎರಡು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೇರಳಕ್ಕೆ ಏಮ್ಸ್ ಮಂಜೂರು ಮಾಡದಿದ್ದರೆ, ಇಂಡಿಯಾ ಮೈತ್ರಿಕೂಟವು ರಾಜ್ಯಕ್ಕೆ ಈ ಸೌಲಭ್ಯ ಒದಗಿಸಲಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ) ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿವೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 25 ಸಾವಿರಕ್ಕೂ ಅಧಿಕ ಪೊಲೀಸರು ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ. ದೆಹಲಿಗೆ ತೆರಳುವ ಹಾಗೂ ದೆಹಲಿಯಿಂದ ನಿರ್ಗಮಿಸುವ ರೈಲುಗಳ ಸಂಚಾರವನ್ನು ಬಂದ್ ಮಾಡಲಾಗಿದೆ. ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.




