ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ ಸುದರ್ಶನ್ ರೆಡ್ಡಿ ಅವರು ಗುರುವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಪ್ರದರ್ಶನವಾಗಿ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ವೇಳೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ಪ್ರಮುಖರು ಹಾಜರಿದ್ದರು. ಈ ಮೂಲಕ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿವೆ ಎಂಬ ಸಂದೇಶವನ್ನು ಸಾರಿದವು.
ಬುಧವಾರ, ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ ಪಿ ರಾಧಾಕೃಷ್ಣನ್ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಇದನ್ನು ಓದಿದ್ದೀರಾ? 2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಹಾಗೂ ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಒಟ್ಟು 781 ಸದಸ್ಯರಿರುವ ಉಭಯ ಸದನಗಳಲ್ಲಿ ಬಹುಮತಕ್ಕೆ 391 ಸದಸ್ಯರ ಬೆಂಬಲ ಅಗತ್ಯವಾಗಿದೆ.
ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಯು ಸೆಪ್ಟೆಂಬರ್ 9, 2025ರಂದು ನಡೆಯಲಿದೆ. ಇಂಡಿಯಾ ಮೈತ್ರಿಕೂಟವು ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸುವ ಮೂಲಕ ತನ್ನ ಒಗ್ಗಟ್ಟನ್ನು ತೋರಿಸಿದರೆ, ಚುನಾವಣೆಯ ಫಲಿತಾಂಶಕ್ಕಾಗಿ ಎಲ್ಲರ ಕಣ್ಣು ಸೆಪ್ಟೆಂಬರ್ 9ರತ್ತ ತಿರುಗಿದೆ.