ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹ ಮತ್ತು ಭೂಕುಸಿತಕ್ಕೆ ಸಿಲುಕಿ ಕನಿಷ್ಠ 11 ಮಂದಿ ಮೃತಪಟ್ಟಿದ್ದು, ಹಲವು ಜನರು ನಾಪತ್ತೆಯಾಗಿದ್ದಾರೆ.
ಹಾನಿಗೀಡಾದ ರಸ್ತೆಗಳು ಮತ್ತು ಸತತ ಮಳೆಯ ನಡುವೆಯೂ ವಿವಿಧ ಇಲಾಖೆಗಳ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
ಪೂಂಚ್ ಜಿಲ್ಲೆಯ ಸುರನ್‌ಕೋಟ್ ತಾಲೂಕಿನಲ್ಲಿ ಅತಿ ಹೆಚ್ಚು ಸಾವು-ನೋವುಗಳು ವರದಿಯಾಗಿವೆ. ಭಾನುವಾರ ಮುಂಜಾನೆ ಸುರಿದ ಭಾರಿ ಮಳೆಗೆ ಸುರನ್‌ಕೋಟ್‌ನ ಲೋವರ್ ಮುರ್ರಾ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಮಣ್ಣಿನಡಿ ಸಿಲುಕಿದ್ದಾರೆ. ಕಾರ್ಯಾಚರಣೆ ನಡೆಸಿ, ಎರಡು ವರ್ಷದ ಮಗು ಸೋಫಿಯಾನ್ ಯಾಸರ್ ಸೇರಿದಂತೆ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.
ಇದರ ಜೊತೆಗೆ, ಸಾಂಗ್ಲಾ ಗ್ರಾಮದಲ್ಲಿ ದಿಢೀರ್ ಪ್ರವಾಹಕ್ಕೆ ಮನೆಯೊಂದು ಕೊಚ್ಚಿಹೋಗಿದ್ದು, ಅಬ್ದುಲ್ ಹಮೀದ್, ಅವರ ಪತ್ನಿ ಶರೀಫಾ ಬೇಗಂ, ಪುತ್ರಿ ಅರೀಬಾ ಮತ್ತು ಸಹೋದರಿ ಮುನಿರಾ ಬೇಗಂ ಎಂಬ ನಾಲ್ವರು ನಾಪತ್ತೆಯಾಗಿದ್ದಾರೆ. ಸಾಂಗ್ಲಾನಿ-ಸುರನ್‌ಕೋಟ್‌ನಲ್ಲಿ ಮನೆ ಕುಸಿದು 22 ವರ್ಷದ ಶಹಜೈಬ್ ಅಹ್ಮದ್ ಎಂಬುವವರು ಸಾವನ್ನಪ್ಪಿದ್ದರೆ, ಮರ್ಹೋಟ್‌ನಲ್ಲಿ ಇರಾಮ್ ಎಂಬ ಬಾಲಕಿ ಹಳ್ಳದಲ್ಲಿ ಕೊಚ್ಚಿಹೋಗಿದ್ದಾಳೆ. ಹವೇಲಿ ತಾಲೂಕಿನಲ್ಲಿ ಸುಮಾರು ಅರ್ಧ ಡಜನ್ ಮನೆಗಳು ಕುಸಿದು ಬಿದ್ದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧುಂಡಕ್ ಲಾತೂಂಗ್ ಸೇತುವೆ ಬಳಿಯ ಹಳ್ಳದಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.
ರಜೌರಿ ಪಟ್ಟಣದಲ್ಲಿಯೂ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನದಿಯೊಂದರಿಂದ ಮಹಿಳೆಯ ಮೃತದೇಹವನ್ನು ಹೊರತೆಗೆಯಲಾಗಿದೆ. ಧಾರಾಲಿ ನದಿಯ ಪ್ರವಾಹದ ನೀರು ಬೇಲಾದಲ್ಲಿರುವ ಹೊಸ ಬಸ್ ನಿಲ್ದಾಣಕ್ಕೆ ನುಗ್ಗಿದ್ದು, ಅಲ್ಲಿ ನಿಲ್ಲಿಸಿದ್ದ ಹಲವು ವಾಹನಗಳು ಕೊಚ್ಚಿಹೋಗಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಕಾರಣ ನೂರಾರು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಜುಲೈ 23ರವರೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ತಮ್ಮ ಭೇಟಿಯನ್ನು ಮೊಟಕುಗೊಳಿಸಿ ಭಾನುವಾರ ಮಧ್ಯಾಹ್ನವೇ ಜಮ್ಮುವಿಗೆ ವಾಪಸ್ಸಾಗಿದ್ದಾರೆ. ಪ್ರಾಣಹಾನಿ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಅವರು, ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಹ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದು, ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರ ಮತ್ತು ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.





