ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅಕ್ರಮವಾಗಿ ಗಳಿಸಿದ್ದ ಆಭರಣ ಮತ್ತು ಸ್ಥಿರಾಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ವಿಸ್ತರಿಸಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.
ಜಯಲಲಿತಾ ಪುತ್ರಿ ಎಂದು ಉಲ್ಲೇಖಿಸಿ ಜೆ ದೀಪಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ಮೊಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಜಯಲಲಿತಾ ಪ್ರಕರಣದ ವಿಚಾರಣೆ ನಡೆಸಿದ್ದರ ವೆಚ್ಚವಾಗಿ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ 5 ಕೋಟಿ ರೂಪಾಯಿ ಪಾವತಿಸಬೇಕು ಎಂದು ವಿಚಾರಣಾಧೀನ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಪ್ರಸ್ತುತ ಅರ್ಜಿಯು ಆಭರಣ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದ್ದು. 5 ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ಪಾವತಿಸುವ ಆದೇಶಕ್ಕೆ ತಡೆಯನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವ ಮೂಲಕ ಕೋರಬಹುದು ಎಂದು ಹೇಳಿ, ವಿಚಾರಣೆ ಮುಂದೂಡಿತು.
ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣ ಮತ್ತು ಇತರ ಪರಿಕರಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಕಳೆದ ಮಾರ್ಚ್ 5ರಂದು ತಡೆ ನೀಡಿತ್ತು. ಹೀಗಾಗಿ, ಮಾರ್ಚ್ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ಬಿದ್ದಿತ್ತು.
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ನೂರಾರು ಕೋಟಿ ಮೌಲ್ಯದ ಚಿನ್ನಾಭರಣ ಸೇರಿ ಇತರೆ ವಸ್ತುಗಳನ್ನು ಕಾನೂನಾತ್ಮಕ ವಾರಸುದಾರರಾದ ತಮಗೆ ಬಿಡುಗಡೆ ಮಾಡಬೇಕು ಎಂದು ಜಯಲಲಿತಾ ಅವರ ಸಹೋದರನ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯವು 2023ರ ಜುಲೈ 12ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರಲ್ಲಿ ಒಬ್ಬರಾದ ಜೆ ದೀಪಾ ಎಂಬುವವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಮೊಹಮ್ಮದ್ ನವಾಝ್ ಅವರಿದ್ದ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಹಸ್ತಾಂತರ ಮಾಡುವ ಪ್ರಕ್ರಿಯೆಗೆ ತಡೆ ನೀಡಿತ್ತು. ಈಗ ಅದೇ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.
ಜಯಲಲಿತಾ ಅವರಿಗೆ ಸೇರಿದ 28 ಕೆಜಿ ಚಿನ್ನ, ವಜ್ರಾಭರಣಗಳು, 800 ಕೆಜಿ ಬೆಳ್ಳಿ ಆಭರಣಗಳು, 11,344 ದುಬಾರಿ ರೇಷ್ಮೆ ಸೀರೆಗಳು ಮತ್ತು 740 ದುಬಾರಿ ಸ್ಯಾಂಡಲ್‌ಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಬೇಕು. ಪ್ರಕರಣಕ್ಕಾಗಿನ ಐದು ಕೋಟಿ ವೆಚ್ಚವನ್ನು ಕರ್ನಾಟಕ ಸರ್ಕಾರಕ್ಕೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು.
