ಬಿಹಾರದ ರಾಜಧಾನಿ ಪಟನಾದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ನಡೆಸಿದ ಬೃಹತ್ ಪಾದಯಾತ್ರೆ ಹಿಂಸಾಚಾರಕ್ಕೆ ತಿರುಗಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಬದಲಾಯಿಸಲಾದ ನೀತಿಗಳನ್ನು ಕೈಬಿಡುವುದು ಮತ್ತು 70ನೇ BPSC ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ಖಂಡಿಸಿ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ,
ಗಾಂಧಿ ಮೈದಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯನ್ನು ತಡೆಯಲು ಪೊಲೀಸರು ಡಾಕ್ ಬಂಗ್ಲಾ ಚೌಕ್ ಹಾಗೂ ಜೆಪಿ ಗೋಲಂಬರ್ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಆದರೆ, ಆಕ್ರೋಶಗೊಂಡ ವಿದ್ಯಾರ್ಥಿಗಳು ಬ್ಯಾರಿಕೇಡ್‌ಗಳನ್ನು ಮುರಿದು ಮುಖ್ಯಮಂತ್ರಿ ನಿವಾಸದತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಅಭ್ಯರ್ಥಿಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ | 10ನೇ ತರಗತಿ ಓದಿದ ನಿರುದ್ಯೋಗಿಗಳಿಗೆ ಮಾ.7ರಿಂದ 1,500 ರೂ. ಭತ್ಯೆ: ಮಮತಾ ಬ್ಯಾನರ್ಜಿ
ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದು, ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ಕೆಲ ಪೋಲಿಸ್ ಅಧಿಕಾರಿಗಳು ಹಾಗೂ ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳದಲ್ಲಿದ್ದ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಪಟನಾದ ಪ್ರಮುಖ ರಸ್ತೆಗಳಲ್ಲಿ ಕೆಲ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಆಡಳಿತ ಮಂಡಳಿಯು ವಿದ್ಯಾರ್ಥಿ ಮುಖಂಡರೊಂದಿಗೆ ಮಾತುಕತೆಗೆ ಸಿದ್ಧ ಎಂದು ತಿಳಿಸಿದ್ದು, ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ.
ಅಭ್ಯರ್ಥಿಗಳ ಮುಖ್ಯ ಬೇಡಿಕೆಗಳೇನು?
- BPSC ನಡೆಸುವ ಶಿಕ್ಷಕರ ನೇಮಕಾತಿ ಪರೀಕ್ಷೆಗೆ (TRE-4) ಸದ್ಯ ಜಾರಿಗೆ ತರಲು ಉದ್ದೇಶಿಸಿರುವ ಎರಡು ಹಂತಗಳ (Pre & Mains) ವ್ಯವಸ್ಥೆಯನ್ನು ತಕ್ಷಣವೇ ರದ್ದುಗೊಳಿಸಿ, ಹಳೆಯಂತೆ ಒಂದೇ ಹಂತದ ಪರೀಕ್ಷೆಯನ್ನು ಮುಂದುವರಿಸಬೇಕು.
- 70ನೇ BPSC ಪರೀಕ್ಷೆಗಳಲ್ಲಿ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪ್ರಸ್ತುತ ಪರೀಕ್ಷೆಯನ್ನು ರದ್ದುಗೊಳಿಸಿ ಪಾರದರ್ಶಕ ತನಿಖೆ ನಡೆಸಬೇಕು.
- ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ (Negative Marking) ಪದ್ಧತಿಯನ್ನು ತೆರವುಗೊಳಿಸಬೇಕು.




