ಕೇರಳದಲ್ಲಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಸಾಂಕೇತಿಕವಾಗಿ ‘ಹುಲ್ಲು’ ತಿಂದು ಪ್ರತಿಭಟನೆ ನಡೆಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ (LPST) ಹುದ್ದೆಗಳ ಭರ್ತಿಗಾಗಿ ಕೇರಳ ಸಾರ್ವಜನಿಕ ಸೇವಾ ಆಯೋಗವು (PSC) 2025ರ ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಿತ್ತು. ಅದೇ ಮೇ 31ರಂದು ಅಭ್ಯರ್ಥಿಗಳ ರ್‍ಯಾಂಕ್ ಪಟ್ಟಿಯನ್ನೂ ಬಿಡುಗಡೆ ಮಾಡಿತ್ತು. ಆದರೆ, ರ್‍ಯಾಂಕ್ ಪಟ್ಟಿ ಸ್ಥಾನ ಪಡೆದುಕೊಂಡಿರುವ ಅಭ್ಯರ್ಥಿಗಳಿಗೆ ಈವರೆಗೆ ನೇಮಕಾತಿ ಆದೇಶ ನೀಡಲಾಗಿಲ್ಲ. ಆದೇಶ ನೀಡಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬದಿಂದ ಬೇಸತ್ತ ಅಭ್ಯರ್ಥಿಗಳು ಹಲವು ರೀತಿಯ ಪ್ರತಿಭಟನೆಗಳನ್ನು ನಡೆಸಿದ್ದು, ಇದೀಗ ಹುಲ್ಲು ತಿನ್ನುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
“ನಾವು LPST ರ್‍ಯಾಂಕ್ ಪಟ್ಟಿಯ ಅಭ್ಯರ್ಥಿಗಳು. 34 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರದಿಂದ ಈವರೆಗೆ ಯಾವುದೇ ಒಳ್ಳೆಯ ಸುದ್ದಿ ಬಂದಿಲ್ಲ. ಎರಡು ತಿಂಗಳ ಕಾಲಾವಕಾಶ ಕೇಳಿದ್ದಾರೆ. ಅಷ್ಟು ಸಮಯ ಏಕೆ ಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಹಲವು ರೀತಿಯಲ್ಲಿ ಪ್ರತಿಭಟನೆ ನಡೆಸಿದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
#WATCH | Thiruvananthapuram, Keralam: Lower Primary School Teacher (LPST) rank holders symbolically eat grass as part of their protest outside the Secretariat, alleging that they have not received appointment orders despite being included in the PSC rank list. pic.twitter.com/tL8SIzWPMi
— ANI (@ANI) August 8, 2026
ಗಮನಾರ್ಹವಾಗಿ, ಇದೇ ಸಮಯದಲ್ಲಿ, ಕೇರಳ ಸಾರ್ವಜನಿಕ ಸೇವಾ ಆಯೋಗ ನಡೆಸಿದ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಇದೀಗ ಮುನ್ನೆಲೆ ಬಂದಿವೆ. ರಾಜ್ಯ ಯೋಜನಾ ಮಂಡಳಿಯ ಉನ್ನತ ಹುದ್ದೆಗಳಿಗೆ ನಡೆಸಲಾದ PSC ಪರೀಕ್ಷೆಯ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.
ಪರೀಕ್ಷಾ ಅಕ್ರಮಗಳ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇರಳ ಸರ್ಕಾರ ಅಪರಾಧ ಇಲಾಖೆಗೆ ಸೂಚಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರ್ಥಿಕ ಅಪರಾಧ ವಿಭಾಗದ ಐಜಿಪಿ ಎಸ್. ಅಜೀತಾ ಬೇಗಂ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ.



