ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಮತ್ತು ರಾಜ್ಯ ಪೊಲೀಸ್ ಮಹಾನಿರೀಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಿದೆ.
ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಕಿರಿಯ ಮಹಿಳಾ ವೈದ್ಯೆ ಶವವಾಗಿ ಪತ್ತೆಯಾಗಿದ್ದರು. ಅವರ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.
“ವರದಿಗಳ ಪ್ರಕಾರ, ಮೃತ ವೈದ್ಯೆಯ ದೇಹದ ಮೇಲೆ ಉಗುರುಗಳಿಂದ ಗೀರಿರುವ ಗುರುತುಗಳಿವೆ. ಕೃತ್ಯ ಎಸಗುವ ವೇಳೆ ಆಕೆ ದುಷ್ಕರ್ಮಿಗಳ ವಿರುದ್ಧ ಹೋರಾಟ ನಡೆಸಿರುವುದು ಇದರಿಂದ ಕಂಡುಬಂದಿದೆ. ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಮೃತ ವೈದ್ಯೆಯ ಕುಟುಂಬವು ಆರೋಪಿಸಿದೆ” ಎಂದು ಎನ್‌ಎಚ್‌ಆರ್‌ಸಿ ಹೇಳಿದೆ.
“ಮಾಧ್ಯಮ ವರದಿಯು ನಿಜವಾಗಿದ್ದರೆ, ಸಂತ್ರಸ್ತೆಯ ಮಾನವ ಹಕ್ಕುಗಳ ಉಲ್ಲಂಘನೆ ಸ್ಪಷ್ಟವಾಗುತ್ತದೆ. ಹೀಗಾಗಿ, ಎರಡು ವಾರಗಳಲ್ಲಿ ವಿವರವಾದ ವರದಿಯನ್ನು ಕೋರಿ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಲಾಗಿದೆ” ಎಂದು ಆಯೋಗ ಹೇಳಿದೆ.
ಪೊಲೀಸರು ನಡೆಸುತ್ತಿರುವ ತನಿಖೆಯ ಪ್ರಸ್ತುತ ಸ್ಥಿತಿ ಮತ್ತು ಹೊಣೆಗಾರರ ವಿರುದ್ಧ ಕ್ರಮಗಳ ಕುರಿತು ವರದಿಯಲ್ಲಿ ಅಧಿಕಾರಿಗಳು ವಿವರಿಸುತ್ತಾರೆ ಎಂದು ನಿರೀಕ್ಷೆಯಿದೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅಧಿಕಾರಿಗಳು ಕೈಗೊಳ್ಳುವ ಅಥವಾ ಪ್ರಸ್ತಾಪಿಸಿದ ಕ್ರಮಗಳ ಬಗ್ಗೆಯೂ ತಿಳಿಯಲು ಆಯೋಗವು ಬಯಸುತ್ತದೆ ಎಂದು ಹೇಳಿದೆ.
ಶುಕ್ರವಾರ ಬೆಳಗ್ಗೆ ಸ್ನಾತಕೋತ್ತರ ತರಬೇತಿ ಪಡೆದ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ.