ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸ್ವಚ್ಛತಾ ಕಾರ್ಮಿಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಮಹಿಳಾ ಪ್ರತಿಭಟನಾಕಾರರ ಮೇಲೆ ಪುರುಷ ಪೊಲೀಸರು ಹಲ್ಲೆಗೈದಿರುವ ಘಟನೆ ಪಂಜಾಬ್‌ನ ಬರ್ನಾಲಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ, ಬರ್ನಾಲಾದ ಡಿಎಸ್‌ಪಿಯನ್ನು ಪಂಜಾಬ್ ಸರ್ಕಾರ ಅಮಾನತು ಮಾಡಿದೆ.
ಬರ್ನಾಲಾದ ಸ್ವಚ್ಛತಾ ಕಾರ್ಮಿಕರು ತಮ್ಮ ಉದ್ಯೋಗವನ್ನು ಕಾಯಂಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು, ಜುಲೈ 8ರಿಂದ ಮುಷ್ಕರ ನಡೆಸುತ್ತಿದ್ದರು. ಮುಷ್ಕರದ ಪರಿಣಾಮ ನಗರದಲ್ಲಿ ಕಸದ ರಾಶಿಗಳು ತುಂಬಿದ್ದವು. ಜಿಲ್ಲಾಡಳಿತ ಮತ್ತು ನಗರಸಭೆ ಪರ್ಯಾಯ ವ್ಯವಸ್ಥೆಯ ಮೂಲಕ ಕಸ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಈ ಕ್ರಮವನ್ನು ವಿರೋಧಿಸಿ ಪ್ರತಿಭಟನಾಕಾರರು ಸ್ಥಳಕ್ಕೆ ಧಾವಿಸಿದಾಗ, ಅವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ತಮ್ಮ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಅನಗತ್ಯವಾಗಿ ಬಲಪ್ರಯೋಗ ಮಾಡಲಾಗಿದೆ. ಮಹಿಳೆಯರ ಮೇಲೂ ಪುರುಷ ಪೊಲೀಸರು ಲಾಠಿ ಬೀಸಿದ್ದಾರೆ. ಪೊಲೀಸರ ದಾಳಿಯಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
Peacefully protesting sanitation workers were met with a brutal lathi-charge by Barnala Punjab Police.
— The Dalit Voice (@ambedkariteIND) July 24, 2026
The violence against women protesters is deeply condemnable. Several women have reportedly sustained serious injuries.
Peaceful protest is a democratic right—not a crime. pic.twitter.com/hje5NMTtlY
ಪ್ರತಿಭಟನಾಕಾರರ ಮೇಲೆ ಪೊಲೀಸರ ಎಸಗಿರುವ ದೌರ್ಜನ್ಯದ ವಿಡಿಯೋಗಳು ವೈರಲ್ ಆಗಿವೆ. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜನಕ್ರೋಶದಿಂದ ಪಂಜಾಬ್ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದ್ದು, ಬರ್ನಾಲಾ ಡಿಎಸ್‌ಪಿ ಸತ್ವೀರ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ. ಡಿಐಜಿ ಸಲ್ಲಿಸಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಕೇವಲ ಅಮಾನತು ಸಾಕಾಗುವುದಿಲ್ಲ. ಘಟನೆಯ ಕುರಿತು ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪಂಜಾಬ್ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ, ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಯುತ ಮತ್ತು ಪಾರದರ್ಶಕ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ.
ಘಟನೆಯ ನಂತರ ಪಂಜಾಬ್‌ನ ಹಲವು ಜಿಲ್ಲೆಗಳಲ್ಲಿ ಸ್ವಚ್ಛತಾ ಕಾರ್ಮಿಕರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಬಠಿಂಡಾ, ಲುಧಿಯಾನಾ ಹಾಗೂ ಜಲಂಧರ್ ಸೇರಿದಂತೆ ವಿವಿಧ ಭಾಗಗಳಲ್ಲಿ ಕಾರ್ಮಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಹಾಗೂ ಕಾರ್ಮಿಕರ ಬೇಡಿಕೆಗಳ ಕುರಿತು ಸರ್ಕಾರ ತಕ್ಷಣ ಮಾತುಕತೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.



