ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ದೇವಾಲಯದ ಗೋಡೆ ಕುಸಿದು ಬಿದ್ದಿದ್ದು, ಒಂಬತ್ತು ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಶಾಹಪುರದಲ್ಲಿ ಭಾನುವಾರ ನಡೆದಿದೆ. ದುರ್ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಶಾಹಪುರದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆಯುತ್ತಿದ್ದ ಧಾರ್ಮಿಕ ಸಮಾರಂಭದದ ವೇಳೆ ಈ ದಾರುಣ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾವನ್ನಪ್ಪಿರುವ ಎಲ್ಲ ಮಕ್ಕಳು 10-15 ವರ್ಷ ವಯಸ್ಸಿನವರು ಎಂದು ಹೇಳಲಾಗಿದೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಗೋಡೆ ಕುಸಿತದ ಅವಶೇಷಗಳನ್ನು ತೆರವುಗೊಳಿಸಿದ್ದಾರೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, “ಘಟನೆಯಿಂದ ತೀವ್ರ ದುಃಖವಾಗಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಮೃತ ಮಕ್ಕಳ ಪ್ರತಿ ಕುಟುಂಬಕ್ಕೆ ಸರ್ಕಾರವು ₹4 ಲಕ್ಷ ಪರಿಹಾರ ನೀಡಲಿದೆ” ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶನಿವಾರವಷ್ಟೇ ಇಂಥದ್ದೇ ಮತ್ತೊಂದು ಘಟನೆ ನಡೆದಿತ್ತು. ಮಕ್ಕಳು ಶಾಲೆಯಿಂದ ಮನೆಗೆ ಹಿಂದಿಗುತ್ತಿದ್ದ ವೇಳೆ, ಮನೆಯ ಗೋಡೆಯೊಂದು ಕುಸಿದು ಘಟನೆ ಸಂಭವಿಸಿತ್ತು. ಘಟನೆಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿದ್ದರು. ಆ ಎಲ್ಲ ಮಕ್ಕಳು 5-7 ವರ್ಷ ವಯೋಮಾನದವರು ಎಂದು ಹೇಳಲಾಗಿತ್ತು. ಮನೆಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ಗೋಡೆ ಕುಸಿತದ ಘಟನೆಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಈ ವರ್ಷ 200ಕ್ಕೂ ಹೆಚ್ಚು ಮಂದಿ ಮಳೆಯಿಂದ ಸಾವನ್ನಪ್ಪಿದ್ದಾರೆ. ಸುಮಾರು 206 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, 2,403 ಮನೆಗಳಿಗೆ ಭಾಗಶಃ ಹಾನಿಯಾಗಿದೆ.