ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಚೇರಿಯಿಂದ ಆಹ್ವಾನ ಸ್ವೀಕರಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.
ಇಂಡಿಯಾ ಒಕ್ಕೂಟದ ನಾಯಕರ ಜೊತೆ ಸಮೋಲೋಚಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಸಮಾರಂಭ ಸ್ವೀಕಾರ ಸಮಾರಂಭದಲ್ಲಿ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ನಾಯಕರು ಪಾಲ್ಗೊಳ್ಳುವುದಿಲ್ಲ ಎಂದು ಶನಿವಾರ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ
ಶನಿವಾರದಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿ ಸ್ಥಾನ ವಹಿಸಿಕೊಳ್ಳಬೇಕೆಂದು ನಿರ್ಣಯ ಅಂಗೀಕರಿಸಿತು. ಈ ಬಗ್ಗೆ ರಾಹುಲ್ ಗಾಂಧಿ ಶೀಘ್ರದಲ್ಲೇ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ. ಪಕ್ಷದ ನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷ ಸ್ಥಾನ ಸ್ವೀಕರಿಸುವುದಾಗಿ ಒಪ್ಪಿಕೊಂಡಿದ್ದಾರೆ.
“ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಾಹುಲ್ ಗಾಂಧಿ ಅವರು ಲೋಕಸಭೆಯ ವಿಪಕ್ಷ ನಾಯಕನ ಸ್ಥಾನ ಅಲಂಕರಿಸುವಂತೆ ಅವಿರೋಧವಾಗಿ ನಿರ್ಣಯ ಕೈಗೊಂಡಿದೆ. ರಾಹುಲ್ ಅವರು ಮಾತ್ರವೇ ಲೋಕಸಭೆಯ ಒಳಗಡೆ ಪಕ್ಷವನ್ನು ಮುನ್ನಡೆಸಲು ಸಮರ್ಥ ನಾಯಕರು” ಎಂದು ಕಾಂಗ್ರೆಸ್ ನಾಯಕ ಕೆ ಸಿ ವೇಣು ಗೋಪಾಲ್ ತಿಳಿಸಿದ್ದಾರೆ.
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಇಂದು ಸಂಜೆ 7.15 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂತ್ರಿಮಂಡಳದ ಸದಸ್ಯರಿಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ.
