ದೆಹಲಿ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಅಧಿಕಾರಕ್ಕೆ ಏರುತ್ತಿರುವ ಬೆನ್ನಲ್ಲೇ ಮಣಿಪುರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
ರಾಜಧಾನಿ ಇಂಫಾಲ್ನಲ್ಲಿರುವ ರಾಜಭವನಕ್ಕೆ ಇಂದು(ಫೆ.9) ಸಚಿವ ಸಂಪುಟದೊಂದಿಗೆ ತೆರಳಿದ ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ಸಲ್ಲಿಸಿದ್ದಾರೆ.
Manipur CM N Biren Singh hands over the letter of resignation from the post of Chief Minister to Governor Ajay Kumar Bhalla at the Raj Bhavan. pic.twitter.com/AOU6MFvScs
— ANI (@ANI) February 9, 2025
ಮಣಿಪುರದಲ್ಲಿ ಕಳೆದ ಎರಡು ವರ್ಷಗಳಿಂದ ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ಹಿಂಸಾಚಾರ ನಡೆಯುತ್ತಿದ್ದರೂ, ಈವರೆಗೆ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿರಲಿಲ್ಲ. ಈಗ ದಿಢೀರ್ ಬೆಳವಣಿಗೆಯಲ್ಲಿ ರಾಜೀನಾಮೆ ಸಲ್ಲಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
2023ರ ಮೇ 3ರಂದು ಮಣಿಪುರದಲ್ಲಿ ಆರಂಭಗೊಂಡಿದ್ದ ಹಿಂಸಾಚಾರವನ್ನು ನಿಗ್ರಹಿಸುವಲ್ಲಿ ಮಣಿಪುರದ ಬಿಜೆಪಿ ಹಾಗೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿತ್ತು.
ಸರಕಾರಿ ಪ್ರಯೋಗಾಲಯದ ವರದಿ ಕೇಳಿದ್ದ ಸುಪ್ರೀಂ ಕೋರ್ಟ್
ಮಣಿಪುರ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕುಮ್ಮಕ್ಕು ನೀಡಿದರು ಎಂದು ಕುಕಿ ಬುಡಕಟ್ಟು ಸಮುದಾಯಗಳು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸೋರಿಕೆಯಾಗಿರುವ ಆಡಿಯೊ ತುಣುಕಿನ ಸತ್ಯಾಸತ್ಯತೆಯ ಕುರಿತು ಸರಕಾರಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕಳೆದ ಫೆ.4ರಂದು ಸೂಚಿಸಿದೆ. ಇದರ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಈಗ ದಿಢೀರ್ ಬೆಳವಣಿಗೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ.ವಿ.ಸಂಜಯ್ ಕುಮಾರ್, “ನಾನು ಸುಪ್ರೀಂ ಕೋರ್ಟ್ ನ್ಯಾಯಾಧೀಶನಾಗಿ ಪದೋನ್ನತಿ ಹೊಂದಿದಾಗ ಮಣಿಪುರ ಮುಖ್ಯಮಂತ್ರಿ ಆಯೋಜಿಸಿದ್ದ ಔತಣ ಕೂಟದಲ್ಲಿ ಭಾಗವಹಿಸಿದ್ದರಿಂದ, ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯಲೆ? ಎಂದು ಅರ್ಜಿದಾರರನ್ನು ಪ್ರಶ್ನಿಸಿದರು. ಅದಕ್ಕೆ ಪ್ರತಿಯಾಗಿ, ನ್ಯಾ. ಸಂಜಯ್ ಕುಮಾರ್ ಅವರು ತಾವಾಗಿ ವಿಚಾರಣೆಯಿಂದ ಹಿಂದೆ ಸರಿಯಬಾರದು” ಎಂದು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರು.
ಕುಕಿ ಆರ್ಗನೈಸೇಷನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಪರ ಹಾಜರಿದ್ದ ವಕೀಲ ಪ್ರಶಾಂತ್ ಭೂಷಣ್, “ಟ್ರೂತ್ ಲ್ಯಾಬ್ಸ್ 2007ರಲ್ಲಿ ಭಾರತದಲ್ಲಿ ಸ್ಥಾಪನೆಯಾಗಿರುವ ಪ್ರಪ್ರಥಮ ಸರ್ಕಾರೇತರ ಸುಸಜ್ಜಿತ ವಿಧಿವಿಜ್ಞಾನ ಪ್ರಯೋಗಾಲಯ ಟ್ರೂತ್ ಲ್ಯಾಬ್ಸ್ ಶೇ. 93ರಷ್ಟು ಧ್ವನಿಮುದ್ರಿಕೆಯು ಎನ್ ಬಿರೇನ್ ಸಿಂಗ್ ಅವರ ಧ್ವನಿಯನ್ನು ಹೋಲುತ್ತದೆ ಎಂದು ದೃಢಪಡಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ಇದನ್ನು ಓದಿದ್ದೀರಾ? ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
ಇದಕ್ಕೆ ಪ್ರತಿಯಾಗಿ ಉತ್ತರಿಸಿದ್ದ ನ್ಯಾಯಾಲಯವು , “ಟ್ರೂತ್ ಲ್ಯಾಬ್ಸ್ ವರದಿಯನ್ನು ಅವಲಂಬಿಸಲು ಸಾಧ್ಯವಿಲ್ಲ. ಧ್ವನಿ ಮುದ್ರಿಕೆಗಳನ್ನು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ” ಎಂದು ಸರಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ನ್ಯಾಯಾಲಯವು, ಮುಚ್ಚಿದ ಲಕೋಟೆಯಲ್ಲಿ ಸರಕಾರಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿತ್ತು. ಇದರ ನಡುವೆಯೇ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
