ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.
ಮುಂಜಾನೆ 4 ಗಂಟೆ ಸುಮಾರಿಗೆ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದಾದ ಬಳಿಕ 14 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಮತ್ತು ರಕ್ಷಣೆ ಕಾರ್ಯಾಚರಣೆ ನಡೆಸಿದೆ. ಸ್ಥಳಕ್ಕೆ ತಲುಪಿದಾಗ, ಬೆಂಕಿ ಕಟ್ಟಡದ ಮೂರನೇ ಮತ್ತು ನಾಲ್ಕನೇ ಮಹಡಿಗೆ ಹರಡಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ದೆಹಲಿ| ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಾವು
ಇನ್ನು 12ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ವರದಿಯಾಗಿದೆ.
This video cannot be played in your browser. Open the video directly
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಡಿಸಿಪಿ ಶಹದಾರ ರಾಜೇಂದ್ರ ಪ್ರಸಾದ್ ಮೀನಾ, “ಬೆಳಿಗ್ಗೆ, ಸುಮಾರು 4 ಗಂಟೆಯ ಹೊತ್ತಿಗೆ, ಅಗ್ನಿ ಅನಾಹುತದ ಬಗ್ಗೆ ಕರೆ ಬಂದಿತು. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸುಮಾರು ಎರಡು ಗಂಟೆಗಳು ಬೇಕಾಯಿತು. ನಂತರ ಶೋಧ ಕಾರ್ಯಾಚರಣೆ ನಡೆಸಲಾಯಿತು” ಎಂದು ಹೇಳಿದ್ದಾರೆ.
ಇನ್ನು ಈ ಅಗ್ನಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಆದರೆ ಎಸಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ನಿವಾಸಿಯೊಬ್ಬರು ಹೇಳಿದ್ದಾರೆ. “ಎಸಿಯಲ್ಲಿ ಸ್ಫೋಟ ಸಂಭವಿಸಿದೆ. ಸುಮಾರು 12-15 ಜನರನ್ನು ರಕ್ಷಿಸಲಾಗಿದೆ. ಇನ್ನೂ 4-5 ಜನರು ಕಾಣೆಯಾಗಿದ್ದಾರೆ” ಎಂದು ಸ್ಥಳೀಯರು ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಇನ್ನೋರ್ವ ನಿವಾಸಿ ಇನ್ನೂ ಎರಡು ಕುಟುಂಬಗಳು ಕಟ್ಟಡದಲ್ಲಿ ಸಿಲುಕಿಕೊಂಡಿವೆ ಎಂದಿದ್ದಾರೆ.





