ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್‍ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ ಹಾರಿದ್ದಾರೆ.
ಪಹಲ್ಗಾಮ್ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ, ಏಪ್ರಿಲ್ 24ರಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಗದಿಯಾಗಿದ್ದ ಅಧಿಕೃತ ಸರ್ಕಾರಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ರದ್ದುಗೊಳಿಸಿದ್ದಾರೆ. ಆದರೂ, ಚುನಾವಣೆಗೆ ಸಜ್ಜಾಗಿರುವ ಬಿಹಾರಕ್ಕೆ ಭೇಟಿ ನೀಡಿದ್ದಾರೆ.
“ಕಾನ್ಪುರದಲ್ಲಿ 20,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಬೇಕಿತ್ತು. ಆದರೆ, ಇತ್ತೀಚಿನ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಜನರ ದುಃಖತಪ್ತ ಮನಸ್ಥಿತಿ ಮತ್ತು ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಕಾನ್ಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿರುವುದಾಗಿ ಆಲ್ ಇಂಡಿಯಾ ರೇಡಿಯೋ ವರದಿ ಮಾಡಿದೆ.
ಆದಾಗ್ಯೂ, ಮೋದಿ ಅವರು ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ ಗುರುವಾರ ಭೇಟಿ ನೀಡಿದ್ದಾರೆ. ಅವರು ಬಿಹಾರದ ಮಧುಬನಿಗೆ ಭೇಟಿ ನೀಡಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಭಯೋತ್ಪಾದಕ ದಾಳಿಯ ಸುದ್ದಿ ಬಂದ ಬಳಿಕ, ಪ್ರಧಾನಿ ಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಬುಧವಾರ ಬೆಳಗ್ಗೆ ಭಾರತಕ್ಕೆ ಮರಳಿದರು. ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಸಭೆ ನಡೆಸಿದ್ದಾರೆಂದು ವರದಿಯಾಗಿದೆ.