ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ‘ಇಂಡಿಯಾ’ ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಲ್ಲಿ ಸತತ ಎಂಟನೇ ದಿನವೂ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಸಂಸತ್ ಕಲಾಪ ಆರಂಭಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಯಿಂದ ಹಿಂದೆ ಸರಿಯಬೇಕೆಂದು ಸಂಸದರು ಒತ್ತಾಯಿಸಿದರು. ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಬಳಿ ಸಾಲುಗಟ್ಟಿ ನಿಂತ ಸಂಸದರು ‘ಎಸ್‌ಐಆರ್–ಲೋಕತಂತ್ರ ಪೇ ವಾರ್’ ಎಂಬ ಬೃಹತ್ ಬ್ಯಾನರ್ ಪ್ರದರ್ಶಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?
ಚುನಾವಣಾ ಆಯೋಗ ಮತ್ತು ಸರ್ಕಾರ ಒಪ್ಪಂದ ಮಾಡಿಕೊಂಡಿರುವುದಾಗಿ ಆರೋಪಿಸಿದ ಅವರು, ‘ಸ್ಟಾಪ್ ಎಸ್‌ಐಆರ್’ ಎಂಬ ಫಲಕಗಳನ್ನು ಹಿಡಿದಿದ್ದರು. ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಸಮಾಜವಾದಿ ಪಕ್ಷ, ಆರ್‌ಜೆಡಿ ಮತ್ತು ಎಡಪಕ್ಷಗಳ ಸದಸ್ಯರು ಸೇರಿದಂತೆ ವಿರೋಧ ಪಕ್ಷದ ಹಲವಾರು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗಿದರು.
ಬಿಹಾರದ ವಿಧಾನಸಭಾ ಚುನಾವಣೆಗೆ ಮುನ್ನ ಹಲವು ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಉದ್ದೇಶವನ್ನು ಚುನಾವಣಾ ಆಯೋಗ ಹೊಂದಿದೆ ಎಂದು ಆರೋಪಿಸಿ, ಎಸ್‌ಐಆರ್ ವಿರುದ್ಧ ಸಂಸತ್ತಿನ ಎರಡೂ ಸದನಗಳಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಷಯದ ಕುರಿತು ಎರಡೂ ಸದನಗಳಲ್ಲಿ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.