ಬುಧವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಖರ್ಗೆ, ಅಮಿತ್ ಶಾ ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕು. ಪ್ರಧಾನಿ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ಸಂಪುಟದಿಂದ ವಜಾ ಮಾಡದಿದ್ದರೆ ಜನರು ಬೀದಿಗಿಳಿಯುತ್ತಾರೆ. ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ಅವರಿಗೆ ಸಂಪುಟದಲ್ಲಿ ಮುಂದುವರಿಯುವ ಹಕ್ಕಿಲ್ಲ. ಅವರನ್ನು ವಜಾ ಮಾಡಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರಿಗಾಗಿ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದರು.
ಬಿಜೆಪಿ ಸಂವಿಧಾನವನ್ನು ಅವಮಾನಿಸಿದೆ ಎಂದು ಆರೋಪಿಸಿದ ಖರ್ಗೆ, ಆ ಪಕ್ಷವು ಸಂವಿಧಾನಕ್ಕಿಂತ ಮನುಸ್ಮೃತಿ ತತ್ವಗಳಿಗೆ ಬದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವಿವಾದಾತ್ಮಕ ಹೇಳಿಕೆ; ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ
ಬಿಜೆಪಿಯವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಅವರು ಮನುಸ್ಮೃತಿಯ ಬಗ್ಗೆ ಮಾತನಾಡುತ್ತಾರೆ. ಅಮಿತ್ ಶಾ ಅವರನ್ನು ಸಮರ್ಥಿಸಲು ಪ್ರಧಾನಿ ಮೋದಿ ಆರು ಟ್ವೀಟ್ ಮಾಡಿದ್ದಾರೆ. ಇದರ ಅಗತ್ಯ ಏನಿತ್ತು? ಬಿ ಆರ್ ಅಂಬೇಡ್ಕರ್ ಬಗ್ಗೆ ಯಾರಾದರೂ ತಪ್ಪು ಹೇಳಿದರೆ ಅವರನ್ನು ಸಂಪುಟದಿಂದ ತೆಗೆದುಹಾಕಬೇಕು. ಮೋದಿ-ಶಾ ಸ್ನೇಹಿತರಾಗಿದ್ದಾರೆ ಮತ್ತು ಪರಸ್ಪರರ ತಪ್ಪುಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಅಂಬೇಡ್ಕರ್ ಹೆಸರು ಹೇಳುವುದು ಕಾಂಗ್ರೆಸ್ಗೆ ಫ್ಯಾಶನ್ ಆಗಿಬಿಟ್ಟಿದೆ ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಹೇಳಿದ್ದರು.ಈಗ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್…. ಎಂದು ಹೇಳುವುದು ಫ್ಯಾಶನ್ ಆಗಿ ಬಿಟ್ಟಿದೆ.ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
