ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.
ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್‌ನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ತೆರವು ಮಾಡಿದ್ದರು. ಈ ಹಿನ್ನಲೆ ವಯನಾಡ್‌ನಲ್ಲಿ ಉಪ ಚುನಾವಣೆ ನಡೆಯುತ್ತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ
ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.
ನಾಮಪತ್ರದ ಬಳಿಕ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕಾ ಗಾಂಧಿ ಬೃಹತ್ ರೋಡ್ ಶೋ ನಡೆಸಿದರು.
ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ತನ್ನ ಮಹಿಳಾ ಮೊರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯಾ ಹರಿದಾಸ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
ನವೆಂಬರ್ 13ರಂದು ಎರಡು ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಪೈಕಿ ವಯನಾಡ್ ಲೋಕಸಭಾ ಕ್ಷೇತ್ರ ಕೂಡಾ ಸೇರಿದೆ. ನಾಂದೇಡ್ ಮತ್ತೊಂದು ಲೋಕಸಭಾ ಕ್ಷೇತ್ರವಾಗಿದೆ. ಇವುಗಳೊಂದಿಗೆ ವಿವಿಧ ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ. ನವೆಂಬರ್ 23ರಂದು ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯೊಂದಿಗೆ ಈ ಎಲ್ಲ ಕ್ಷೇತ್ರಗಳ ಚುನಾವಣಾ ಫಲಿತಾಂಶವೂ ಪ್ರಕಟಗೊಳ್ಳಲಿದೆ.
