ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ, ನಿಯಮಬಾಹಿರವಾಗಿ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಿಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ. ವಿಪಕ್ಷಗಳನ್ನು ಭೇಟಿಯಾಗಲು ಸಿಜೆಐ ಸೂರ್ಯ ಕಾಂತ್ ಅವರು ನಿರಾಕರಿಸಿ, ಅರ್ಜಿ ಸಲ್ಲಿಸುವಂತೆ ತಿಳಿಸಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.
ಕೇಂದ್ರ ಕಾನೂನು ಸಚಿವಾಲಯದ ಅಧಿಕೃತ ಗೆಜೆಟ್ ಸೂಚನೆ ಇಲ್ಲದೆ, ಯಾವುದೇ ಶಾಸನಬದ್ಧ ಅನುಮತಿ ಪಡೆಯದೆ, SIR ಪ್ರಕ್ರಿಯೆ ವೇಳೆ ‘ಫಾರ್ಮ್ 6’ ನಿಯಮಗಳನ್ನು ಏಕಪಕ್ಷೀಯವಾಗಿ ಬದಲಾಯಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಹೊಸ ಮತ್ತು ಯುವ ಮತದಾರರನ್ನು (Gen Z) ನಿಯಮಬಾಹಿರವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಸಿಇಸಿ ಗ್ಯಾನೇಶ್ ಕುಮಾರ್ ಈ ಹಂತ ತಲುಪಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್
ಚುನಾವಣಾ ಆಯೋಗದ ತಟಸ್ಥತೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣವೇ ವಜಾಗೊಳಿಸಬೇಕು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಮತ್ತು ಇಡೀ SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿರುವ ಸ್ಪಷ್ಟನೆಯಲ್ಲಿ ‘ಫಾರ್ಮ್ 6’ ಪ್ರಕ್ರಿಯೆಯ ಯಾವುದೇ ಬದಲಾವಣೆಗೆ ತಾವು ಅನುಮತಿ ನೀಡಿಲ್ಲ ಎಂದು ತಿಳಿಸಿದ್ದು, ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿದೆ. ಈ ನಡುವೆ, ಚುನಾವಣಾ ಆಯೋಗ ಪ್ರತಿಕ್ರಿಯಿಸುವ ಬದಲು ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ವಿಪಕ್ಷಗಳ ಈ ಆರೋಪಗಳನ್ನು ತಳ್ಳಿಹಾಕಿದೆ.




