ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ‘ನೀಟ್’ (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಸ್ತಾಪಿಸಿದ ಬೆನ್ನಲ್ಲೇ ರಾಜ್ಯಸಭೆಯ ಕಲಾಪವೂ ಮಧ್ಯಾಹ್ನದವರೆಗೆ ಮುಂದೂಡಲಾಯಿತು.
ಬೆಳಿಗ್ಗೆ ಆರಂಭವಾದ ಬಳಿಕ ಈ ವಿಚಾರದ ಬಗ್ಗೆ ಮಾತನಾಡಲು ಅನುಮತಿ ಕೋರಿದ ಖರ್ಗೆ, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಉಲ್ಲೇಖಿಸಿದ ಅವರು, “ವಿದ್ಯಾರ್ಥಿಗಳ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಬಲಪ್ರಯೋಗ ಮಾಡುತ್ತಿದೆ, ಜಂತರ್ ಮಂತರ್‌ನಲ್ಲಿ ಲಾಠಿಚಾರ್ಜ್ ನಡೆಸಲಾಗಿದೆ. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಿ ಅವರನ್ನು ಅಲ್ಲಿಂದ ಓಡಿಸುವ ಯತ್ನ ನಡೆಯುತ್ತಿದೆ” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಖರ್ಗೆ ಅವರ ಈ ಆರೋಪಗಳು ಹಾಗೂ ನೀಟ್ ಅಕ್ರಮಗಳ ಕುರಿತು ಚರ್ಚೆಗೆ ಪಟ್ಟು ಹಿಡಿದು ವಿಪಕ್ಷಗಳು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.
ಇತ್ತ ಲೋಕಸಭೆಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ನೀಟ್ ವಿವಾದ ಹಾಗೂ ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು ಪ್ರಕರಣಗಳ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿರೋಧ ಪಕ್ಷದ ಸದಸ್ಯರು ನಿರಂತರವಾಗಿ ಘೋಷಣೆಗಳನ್ನು ಕೂಗಿದ್ದರಿಂದ ಲೋಕಸಭೆಯನ್ನೂ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. ನೀಟ್ ಆರೋಪಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳ ಹಲವು ನಾಯಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.





