ಮಧ್ಯಪ್ರದೇಶದ ಶಾಲೆಯ ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಭೋಪಾಲ್‌ನ ಖಾಸಗಿ ಶಾಲೆಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ದೂರು ನೀಡದಂತೆ ಸಂತ್ರಸ್ತ ಬಾಲಕಿಯ ತಾಯಿಗೆ ಒತ್ತಡ ಹಾಕಿ, ಅಮಾನತುಗೊಂಡಿದ್ದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ನನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ಏಪ್ರಿಲ್ 30ರಂದು ಅತ್ಯಾಚಾರ ಪ್ರಕರಣದ ದೂರು ದಾಖಲಿಸಿದ್ದರು. ಪೊಲೀಸರು ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾಗಿ ಎರಡು ವಾರಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
“ಅತ್ಯಾಚಾರ ಆರೋಪದ ಮೇಲೆ ಮಂಗಳವಾರ ಶಾಲಾ ಮಾಲೀಕರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಸಹ ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ” ಎಂದು ಪೊಲೀಸ್ ಉಪ ಆಯುಕ್ತ (ಡಿಸಿಪಿ) ಶ್ರದ್ಧಾ ತಿವಾರಿ ಹೇಳಿದ್ದಾರೆ.
“ದೂರು ದಾಖಲಿಸದಂತೆ ಸಂತ್ರಸ್ತೆಯ ತಾಯಿಗೆ ಒತ್ತಡ ಹೇರಿದ್ದಕ್ಕಾಗಿ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ಸಿಂಗ್ ರಜಪೂತ್ ಅವರನ್ನು ಅಮಾನತುಗೊಳಿಸಲಾಗಿತ್ತು. ಈಗ, ಅವರನ್ನೂ ಬಂಧಿಸಲಾಗಿದೆ” ಎಂದು ತಿವಾರಿ ಹೇಳಿದ್ದಾರೆ.
ಘಟನೆ ಸುದ್ದಿಯಾದ ಬಳಿಕ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ಆದೇಶಿಸಿದ್ದರು.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.