ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ನಾಲ್ವರು ಮಹಿಳಾ ಕುಸ್ತಿಪಟುಗಳು ದೆಹಲಿಯ ಸೆಷನ್ಸ್ ಕೋರ್ಟ್ (ರೌಸ್ ಅವೆನ್ಯೂ ಕೋರ್ಟ್) ಮೆಟ್ಟಿಲೇರಿದ್ದಾರೆ.
ಹಿರಿಯ ವಕೀಲೆ ರೆಬೆಕಾ ಜಾನ್ ಅವರ ಮುಖಾಂತರ ಮಹಿಳಾ ಕುಸ್ತಿಪಟುಗಳು ಈ ಕ್ರಿಮಿನಲ್ ರಿವಿಷನ್ ಅರ್ಜಿಯನ್ನು ಸಲ್ಲಿಸಿದ್ದು, ಹಿರಿಯ ನ್ಯಾಯಾಧೀಶರಾದ ದಿಗ್ವಿಜಯ್ ಸಿಂಗ್ ಅವರ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬರಲಿದೆ.
ಇದನ್ನೂ ಓದಿ: ರಾಮಮಂದಿರ ದೇಣಿಗೆ ದುರುಪಯೋಗ: ಬಿಜೆಪಿಯ ಬ್ರಿಜ್ ಭೂಷಣ್ ಆರೋಪಗಳ ಸುತ್ತ
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ ಖುಲಾಸೆ ತೀರ್ಪು ಕಾನೂನಾತ್ಮಕವಾಗಿ ಅಸಿಂಧುವಾಗಿದೆ ಮತ್ತು ಇದು ಕೇವಲ ಊಹಾಪೋಹಗಳ ಮೇಲೆಯೇ ಆಧಾರಿತವಾಗಿದೆ ಎಂದು ಮಹಿಳಾ ಕುಸ್ತಿಪಟುಗಳು ತಮ್ಮ ಮೇಲ್ಮನವಿಯಲ್ಲಿ ವಾದಿಸಿದ್ದಾರೆ.
ಸಂತ್ರಸ್ತರ ಹೇಳಿಕೆಗಳು ಹಾಗೂ ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯವು ಸಮಗ್ರವಾಗಿ ಪರಿಶೀಲಿಸದೆ, ತಾರತಮ್ಯದಿಂದ ಕೂಡಿದ ಮತ್ತು ಹಳೆಯ ಸಾಂಪ್ರದಾಯಿಕ ಮನಸ್ಥಿತಿಯ ಆಧಾರದ ಮೇಲೆ ತೀರ್ಪು ನೀಡಿದೆ ಎಂದು ಆರೋಪಿಸಿದ್ದಾರೆ.
2023ರಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ WFI ಸಹಾಯಕ ಕಾರ್ಯದರ್ಶಿಯಾಗಿದ್ದ ವಿನೋದ್ ತೋಮರ್ ವಿರುದ್ಧ ಹಲವು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ವಿಚಾರವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿ ಪೊಲೀಸರು ತನಿಖೆ ನಡೆಸಿ ಐಪಿಸಿ ಸೆಕ್ಷನ್ 354, 354A, 354D ಮತ್ತು 506 ರ ಅಡಿಯಲ್ಲಿ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.
ಆದಾಗ್ಯೂ, ದೆಹಲಿಯ ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್, ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಿ ಆಗಸ್ಟ್ 3ರಂದು ಬ್ರಿಜ್ ಭೂಷಣ್ ಸಿಂಗ್ ಅವರನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ಇದೀಗ ಕುಸ್ತಿಪಟುಗಳು ಮೇಲ್ಮನವಿ ಸಲ್ಲಿಸಿದ್ದಾರೆ.




