39 ವರ್ಷದ ಕಾಮುಕ ಮಗನೊಬ್ಬ ತನ್ನ 65 ವರ್ಷದ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯು ಈ ಹಿಂದೆ ವ್ಯಕ್ತಿಯೊಬ್ಬನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು. ಅದಕ್ಕೆ, ಶಿಕ್ಷೆಯಾಗಿ ಅತ್ಯಾಚಾರ ಎಸಗಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆಂದು ವರದಿಯಾಗಿದೆ.
ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯ ಪತಿ ನಿವೃತ್ತ ಸರ್ಕಾರಿ ಉದ್ಯೋಗಿ. ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸಂತ್ರಸ್ತೆಯ ಪತಿ ಮತ್ತು ಕಿರಿಯ ಮಗಳು ಜುಲೈ 17ರಂದು ಸೌದಿ ಅರೇಬಿಯಾಗೆ ತೆರಳಿದ್ದರು. ಈ ವೇಳೆ, ಆರೋಪಿ ಮಗ ತನ್ನ ತಾಯಿಯನ್ನು ಕೊಠಡಿಯಲ್ಲಿ ಕೂಡಿಹಾಕಿದ್ದಾನೆ. ಆತ ಬಾಲ್ಯದಲ್ಲಿದ್ದಾಗ ಆಕೆ ವಿವಾಹೇತರ ಸಂಬಂಧ ಹೊಂದಿದ್ದಳೆಂದು ಆರೋಪಿಸಿ, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಪತಿ ಮತ್ತು ಮಗಳು ದೆಹಲಿಗೆ ಹಿಂದಿರುಗಿದ ಬಳಿಕ, ಮಹಿಳೆ ತನ್ನ ಕಿರಿಯ ಮಗಳ ಬಳಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಬಳಿಕ, ಹೌಜ್ ಖಾಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 64ರ (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.