ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ಬಲವಂತವಾಗಿ ಕರೆದೊಯ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೋನಮ್ರನ್ನು ವಶಕ್ಕೆ ಪಡೆದ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ದೆಹಲಿ ಪೊಲೀಸರು, “ಕಳೆದ 21 ದಿನಗಳಿಂದ ನಿರಂತರವಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸುತ್ತಿತ್ತು. ಈ ಹಿನ್ನೆಲೆಯಲ್ಲಿ, ವೈದ್ಯಕೀಯ ತಜ್ಞರ ಸಲಹೆಯ ಮೇರೆಗೆ ಮತ್ತು ಹೈಕೋರ್ಟ್ ಆದೇಶದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.
ಭಾರತದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆಯಾಗಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟವನ್ನು ಬೆಂಬಲಿಸಿ ವಾಂಗ್ಚುಕ್ ಉಪವಾಸ ನಡೆಸುತ್ತಿದ್ದರು. ಅವರೊಂದಿಗೆ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ಸಂಘಟನೆಯ ವಿದ್ಯಾರ್ಥಿ ಹೋರಾಟಗಾರರಾದ ನೇಹಾ, ಆಮೆನ್ ಮತ್ತು ಮನೀಶ್ ಕೂಡ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆಯಲು ಮುಂದಾದಾಗ ಸ್ಥಳದಲ್ಲಿದ್ದ ಸಹ ನೂರಾರು ವಿದ್ಯಾರ್ಥಿಗಳು ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಪೊಲೀಸರು ವಿದ್ಯಾರ್ಥಿ ಮುಖಂಡರನ್ನು ಕರೆದೊಯ್ಯದಂತೆ ತಡೆಯಲು ಪ್ರತಿಭಟನಾಕಾರರ ಸುತ್ತಲೂ ಮಾನವ ಸರಪಳಿ ನಿರ್ಮಿಸಿ ರಕ್ಷಣೆ ನೀಡಲು ಯತ್ನಿಸಿದರು.
ಈ ನಡುವೆ, ಕಾಕ್ರೋಚ್ ಜನತಾ ಪಾರ್ಟಿಯ ವಕ್ತಾರ ಸೌರವ್ ದಾಸ್ ಅವರು ಪ್ರತಿಕ್ರಿಯಿಸಿ, “ಸಿಜೆಪಿ ಸಂಸ್ಥಾಪಕ ಅಭಿಜೀತ್ ಧೀಪ್ಕೆ ಅವರು ತಂಗಿದ್ದ ಸ್ಥಳವನ್ನು ಕೂಡ ಪೊಲೀಸರು ಸುತ್ತುವರೆದಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸದ್ಯ ಜಂತರ್ ಮಂತರ್ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಆಕ್ರೋಶ ಮುಂದುವರಿದಿದೆ.



