ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರದ ಪ್ರಮುಖ ಪಾಲುದಾರ ಕಾಂಗ್ರೆಸ್‌ಗೆ ರಾಜಕೀಯವಾಗಿ ತಲೆಬಿಸಿ ತಂದೊಡ್ಡಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಐತಿಹಾಸಿಕ ಜೆನ್-ಝೀ ಪ್ರತಿಭಟನೆಗೆ ಬೆಂಬಲ ಸೂಚಿಸಿ ತಾನೂ ಆಂದೋಲನದಲ್ಲಿ ಸಕ್ರಿಯವಾಗಿದ್ದ ಕಾಂಗ್ರೆಸ್ ಇದೀಗ ತನ್ನದೇ ನೆಲದ ನಡೆಯುತ್ತಿರುವ ಪ್ರತಿಭಟನೆ ಇಕ್ಕಟ್ಟಿಗೆ ಸಿಲುಕಿಸಿದೆ. ಪ್ರತಿಭಟನಾಕಾರರ ಬೇಡಿಕೆಗಳನ್ನು ಬಗೆಹರಿಸುವಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸರ್ಕಾರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್‌ನಲ್ಲಿ ವ್ಯಕ್ತವಾಗಿದ್ದು, ಪ್ರತಿಭಟನಾ ನಿರತ ಯುವಕರ ಪರವಾಗಿ ನಿಂತಿರುವ ಸಂದೇಶವನ್ನು ಜನರಿಗೆ ನೀಡಲು ಪಕ್ಷ ಮುಂದಾಗಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಎಐಸಿಸಿ ಜಾರ್ಖಂಡ್ ಉಸ್ತುವಾರಿ ಕೆ. ರಾಜು ನೇತೃತ್ವದಲ್ಲಿ ರಾಜ್ಯದ ಕಾಂಗ್ರೆಸ್ ಸಚಿವರು ಬುಧವಾರ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಭೇಟಿ ಮಾಡಿ, ಪ್ರತಿಭಟನಾಕಾರರ “ನ್ಯಾಯಸಮ್ಮತ ಕಳವಳಗಳನ್ನು” ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಉದ್ಯೋಗಾಕಾಂಕ್ಷಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಆರಂಭದಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿದ್ದ ಪ್ರತಿಭಟನಾಕಾರರು, ಬಳಿಕ ತಮ್ಮ ಬೇಡಿಕೆಯನ್ನು ಬದಲಿಸಿ ಜಾರ್ಖಂಡ್ ಹೊರಗಿನ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸ್ವತಂತ್ರ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬೆಳವಣಿಗೆಗಳು, ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಮುಂದಿಟ್ಟುಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸುತ್ತಿರುವ ಸಂದರ್ಭದಲ್ಲೇ ನಡೆದಿವೆ. ಸಂಸತ್ತಿನಲ್ಲೂ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಈ ವಿಷಯವನ್ನು ಮುಂದಿಟ್ಟುಕೊಂಡು ಗೃಹ ಸಚಿವ ಅಮಿತ್ ಶಾ ಉತ್ತರ ನೀಡಬೇಕು ಎಂದು ಆಗ್ರಹಿಸಿ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ.
ಜಾರ್ಖಂಡ್ ಪ್ರತಿಭಟನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಇದುವರೆಗೆ ಬಹಿರಂಗವಾಗಿ ಪ್ರತಿಕ್ರಿಯಿಸದಿದ್ದರೂ, ರಾಜ್ಯ ಸರ್ಕಾರದ ನಡೆ ಪಕ್ಷಕ್ಕೆ ರಾಜಕೀಯವಾಗಿ ಹಿನ್ನಡೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಪದಾಧಿಕಾರಿಗಳಿಗೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸುವಂತೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಪ್ರಧಾನಿ ಮೋದಿ ವಿಡಿಯೋ ಕಿತ್ತೆಸೆದಿದ್ದ ಫೇಸ್‌ಬುಕ್; ಜುಕರ್‌ಬರ್ಗ್ ಕ್ಷಮಾಪಣೆಗೆ 3 ದಿನಗಳ ಗಡುವು ನೀಡಿದ ಸಂಸದೀಯ ಸಮಿತಿ
“ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿಚಾರವನ್ನು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ. ಶನಿವಾರ ಪ್ರಯಾಗರಾಜ್‌ನಲ್ಲಿ ಅವರು ವಿದ್ಯಾರ್ಥಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂತಹ ಸಂದರ್ಭದಲ್ಲಿ ರಾಂಚಿ ಪ್ರತಿಭಟನೆಗೆ ನಾವು ಬೆಂಬಲ ನೀಡದಿದ್ದರೆ ಅಥವಾ ಬೆಂಬಲಿಸುತ್ತಿರುವಂತೆ ಕಾಣಿಸದಿದ್ದರೆ ಪಕ್ಷಕ್ಕೆ ರಾಜಕೀಯವಾಗಿ ಹಿನ್ನಡೆಯಾಗಲಿದೆ” ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಇದೇ ವೇಳೆ, ಪ್ರತಿಭಟನೆ ಕುರಿತು ಮೌನ ಮುರಿದ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸರ್ಕಾರವು ಪ್ರತಿಭಟನಾಕಾರರ ಕಳವಳಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಅವರ ಬೇಡಿಕೆಗಳು ಮತ್ತು ಪ್ರಶ್ನೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಸೂಕ್ತ ಸಮಯದಲ್ಲಿ ಅಗತ್ಯ ನಿರ್ಧಾರಗಳನ್ನು ಪ್ರಕಟಿಸಲಾಗುವುದು. ಸರ್ಕಾರದ ಕ್ರಮಗಳಿಂದ ಪ್ರತಿಭಟನಾಕಾರರಿಗೆ ಸಮಾಧಾನ ಸಿಗಲಿದೆ ಎಂಬ ವಿಶ್ವಾಸವಿದೆ” ಎಂದು ಹೇಳಿದ್ದಾರೆ.
2025ರ ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಜೆಎಂಎಂ ಮತ್ತು ಕಾಂಗ್ರೆಸ್ ನಡುವಿನ ಸಂಬಂಧ ಹಳಸಿತ್ತು. ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳು ತಮ್ಮ ಪಾಲಿನ ಸ್ಥಾನಗಳನ್ನು ಕಸಿದುಕೊಳ್ಳಲು ರಾಜಕೀಯ ಸಂಚು ರೂಪಿಸಿವೆ ಎಂದು ಆರೋಪಿಸಿ ಜೆಎಂಎಂ ಚುನಾವಣಾ ಕಣದಿಂದ ಹಿಂದೆ ಸರಿದಿತ್ತು.
ಕಳೆದ ತಿಂಗಳು ಜಾರ್ಖಂಡ್ ರಾಜ್ಯಸಭೆ ಚುನಾವಣೆಯಲ್ಲಿಯೂ ಉಭಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಇಂಡಿಯಾ ಮೈತ್ರಿಕೂಟ ಗೆಲ್ಲಬಹುದಾದ ಎರಡು ಸ್ಥಾನಗಳಲ್ಲಿ ಎರಡನ್ನೂ ಜೆಎಂಎಂ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದರೂ, ಕಾಂಗ್ರೆಸ್ ಏಕಪಕ್ಷೀಯವಾಗಿ ತನ್ನ ಅಭ್ಯರ್ಥಿಯನ್ನು ಘೋಷಿಸಿತ್ತು. ನಂತರ ಆಡಳಿತಾರೂಢ ಮೈತ್ರಿಕೂಟದ ಕೆಲವು ಶಾಸಕರು ಅಡ್ಡಮತದಾನ ಮಾಡಿದ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದು, ಎರಡು ಪಕ್ಷಗಳ ನಡುವಿನ ಅಸಮಾಧಾನ ಮತ್ತಷ್ಟು ಹೆಚ್ಚಾಗಿದೆ.




