ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿಯು ಆಂತರಿಕ ಪರೀಕ್ಷೆಯ ಅಂಕಗಳನ್ನು ಕಡಿತಗೊಳಿಸುವ ಬೆದರಿಕೆಯೊಡ್ಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಪ್ರಸಿದ್ಧ ಸ್ಕಾಟಿಷ್ ಚರ್ಚ್ ಕಾಲೇಜಿನ ಆಡಳಿತದ ವಿರುದ್ಧ ವಿದ್ಯಾರ್ಥಿಗಳು ಈ ಗಂಭೀರ ಆರೋಪ ಮಾಡಿದ್ದಾರೆ. ಕಾಲೇಜಿನಲ್ಲಿ ‘ನಮೋ ಸೇವಾ – ಅನ್‌ಟೋಲ್ಡ್ ಸ್ಟೋರೀಸ್’ ಎಂಬ ನಾಟಕವನ್ನು ಆಯೋಜಿಸಲಾಗುತ್ತಿದೆ. ಈ ನಾಟಕದಲ್ಲಿ ನಟಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಮೌಲ್ಯಮಾಪನ ಮತ್ತು ಪರೀಕ್ಷಾ ಅಂಕಗಳನ್ನು ಕಡಿತಗೊಳಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ವಿದ್ಯಾರ್ಥಿಗಳು ಆಪಾದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನ ಸಪ್ತಾಹದ ಅಂಗವಾಗಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಉನ್ನತ ಶಿಕ್ಷಣ ಇಲಾಖೆಯು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 10 ರವರೆಗೆ ‘ಸೇವಾ ಸಂಕಲ್ಪ ಅಭಿಯಾನ’ ಆಯೋಜಿಸಲು ರಾಜ್ಯದ ಸರ್ಕಾರಿ ಅನುದಾನಿತ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಇದರ ಭಾಗವಾಗಿ ಕಾಲೇಜುಗಳಲ್ಲಿ ನಾಟಕ ಪ್ರದರ್ಶನ, ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ, ಸೆಪ್ಟೆಂಬರ್ 29ರಂದು ಕಾಲೇಜು ರಂಗಮಂದಿರದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಈ ನಾಟಕದಲ್ಲಿ ರಾಜಕೀಯ ಉಲ್ಲೇಖಗಳಿದ್ದು, ಪ್ರೇಕ್ಷಕರಿಂದ ‘ಜೈ ಶ್ರೀರಾಮ್’ ಘೋಷಣೆ ಕೂಗಿಸುವ ಪ್ರಸಂಗಗಳೂ ಸೇರಿವೆ ಎಂದು ಕಾಲೇಜಿನ ಡ್ರಾಮಾ ಕ್ಲಬ್ ಸದಸ್ಯರಾದ ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಗುರುವಾರ ನಡೆದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಲು ಒಪ್ಪದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯು ಆಂತರಿಕ ಪರೀಕ್ಷೆಗಳ ಅಂಕಗಳನ್ನು ಕಡಿತ ಮಾಡುವ ಪರೋಕ್ಷ ಬೆದರಿಕೆ ಹಾಕಿದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಕಾಲೇಜಿನ ಅಧಿಕೃತ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಚರ್ಚೆಯಾಗಿದ್ದು, ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ, ಕಾಲೇಜು ಮಂಡಳಿಯು ತನ್ನ ಧೋರಣೆಯನ್ನು ಬದಲಿಸಿಕೊಂಡಿದೆ. ಆದರೆ, ಈ ಎಲ್ಲ ಆರೋಪಗಳನ್ನು ತಳ್ಳಿಹಾಕಿರುವ ಕಾಲೇಜಿನ ಪ್ರಾಂಶುಪಾಲ ಮಧುಮಂಜರಿ ಮಂಡಲ್, “ನಾಟಕದಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ವಿದ್ಯಾರ್ಥಿಗಳ ಇಚ್ಛೆಗೆ ಬಿಟ್ಟಿದ್ದು” ಎಂದು ಹೇಳಿದ್ದಾರೆ.
“ಉನ್ನತ ಶಿಕ್ಷಣ ಇಲಾಖೆಯ ಆದೇಶದಂತೆ ಪ್ರಧಾನಿಯವರ ಸಾರ್ವಜನಿಕ ಸೇವೆಯನ್ನು ಸ್ಮರಿಸಲು ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಡ್ರಾಮಾ ಕ್ಲಬ್‌ನ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿರಬಹುದು ಆದರೆ ಯಾರಿಗೂ ಯಾವುದೇ ರೀತಿಯ ಬಲವಂತ ಮಾಡಿಲ್ಲ” ಎಂದು ಪ್ರಾಂಶುಪಾಲರು ಸಮಜಾಯಿಷಿ ನೀಡಿದ್ದಾರೆ.



