ರಾಷ್ಟ್ರ ರಾಜಧಾನಿ ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬಾತ್ರಾ ಚಿತ್ರಮಂದಿರದ ಬಳಿಯ ಜ್ಞಾನ ಕಟ್ಟಡದ ಮೂರನೇ ಅಂತಸ್ತಿನಲ್ಲಿ ಕಾರ್ಯಾಚರಿಸುತ್ತಿದ್ದ ಸಂಸ್ಕೃತಿ ಕೋಚಿಂಗ್ ಸೆಂಟರ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ.
ಕೋಚಿಂಗ್ ಸೆಂಟರ್ನಲ್ಲಿ ಪಾಠ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದರು. ಪ್ರಾಣ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಕಟ್ಟಡದ ಹೊರಗೆ ನೇತಾಡುತ್ತಿದ್ದ ಹಗ್ಗವನ್ನು ಬಳಸಿ ಕೆಳಗಿಳಿದಿದ್ದಾರೆ. ಈ ವೇಳೆ 4 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ʻಬೆಂಕಿ ನಂದಿಸುವ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕಟ್ಟಡದಿಂದ ಹೊರತರಲಾಗಿದೆʼ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹೇಳಿದ್ಧಾರೆ.
ದುರದೃಷ್ಟಕರ: ದೆಹಲಿ ಸಿಎಂ
ಮುಖರ್ಜಿ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡ ಅತ್ಯಂತ ದುರದೃಷ್ಟಕರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ʻಕಟ್ಟಡದಿಂದ ತಪ್ಪಿಸಿಕೊಳ್ಳುವ ವೇಳೆ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಭಯಪಡುವ ಅಗತ್ಯವಿಲ್ಲ, ಅಗ್ನಿಶಾಮಕ ಇಲಾಖೆ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆʼ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಮುಖರ್ಜಿ ನಗರವು ದೆಹಲಿ ವಿಶ್ವವಿದ್ಯಾನಿಲಯದ ಸಮೀಪದಲ್ಲಿದ್ದು, ಯುಪಿಎಸ್ಸಿ ಆಕಾಂಕ್ಷಿಗಳ ಪ್ರಮುಖ ಕೇಂದ್ರವಾಗಿದೆ. ನೂರಾರು ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್ ಸೆಂಟರ್ಗಳು ಈ ಪ್ರದೇಶದಲ್ಲಿದ್ದು, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ನೆರೆ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳ ಪ್ರಮುಖ ತಾಣವಾಗಿದೆ.