ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ದೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ.
ಸಾರ್ವಜನಿಕ ರಸ್ತೆ, ಫುಟ್‌ಪಾತ್‌ಗಳು, ರೈಲು ಮಾರ್ಗಗಳು, ಜಲಮೂಲಗಳ ಒತ್ತುವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಈ ಆದೇಶವು ಕನಿಷ್ಠ ಅಕ್ಟೋಬರ್ 1ರವರೆಗೆ ಮುಂದುವರೆಯಲಿದ್ದು, ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಅಂದು ನಡೆಸಲಿದೆ ಎಂದು ಹೇಳಿದೆ.
ಕಾನೂನು ಬಾಹಿರ, ಕ್ರಿಮಿನಲ್ ಮೊಕದ್ದಮೆಗಳಲ್ಲಿ ಆರೋಪಿಗಳ ಮನೆ ಅಥವಾ ಅಂಗಡಿಗಳನ್ನು ಬುಲ್ಡೋಜಿಂಗ್ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ಕೋರಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ. ಈ ವೇಳೆ ಈ ಆದೇಶವನ್ನು ಹೊರಡಿಸಿದೆ.
ಇದನ್ನು ಓದಿದ್ದೀರಾ? ಮಂಡ್ಯ | ಎಂಟು ಲಕ್ಷ ವ್ಯಯಿಸಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸಿದ ಪ್ರಾಥಮಿಕ ಶಾಲಾ ಶಿಕ್ಷಕ
“ಮುಂದಿನ ದಿನಾಂಕದವರೆಗೆ ಈ ನ್ಯಾಯಾಲಯದ ಅನುಮತಿ ಪಡೆಯದೆ ಯಾವುದೇ ನೆಲಸಮ ಕಾರ್ಯವನ್ನು ದೇಶದಲ್ಲಿ ಯಾರೂ ಮಾಡಬಾರದು. ಆದರೆ, ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು, ರೈಲ್ವೆ ಮಾರ್ಗಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ನಿರ್ಮಾಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ” ಎಂದು ಇದೇ ವೇಳೆ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
