ಪರವಾನಗಿ ನವೀಕರಿಸದೆ ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಪವರ್ ಟಿವಿ ಚಾನೆಲ್‌ಗೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್‌ಎಂ ರಮೇಶ್ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸುವಂತೆ ಪವರ್ ಟಿವಿಗೆ ನಿರ್ದೇಶನ ನೀಡಿತ್ತು.
ಪವರ್ ಟಿವಿ ತನ್ನ ಚಾನೆಲ್‌ಗೆ ಪರವಾನಗಿ ನವೀಕರಿಸದ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕ್ರಮ ಸ್ಥಗಿತಗೊಳಿಸಲು ಆದೇಶಿಸಲಾಗಿತ್ತು.
ಇದಾದ ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಬೆಂಗಳೂರಿನ ದಬ್ಬೇಗಟ್ಟ ಮಧು ಲಕ್ಷ್ಮಣ, ಮೆಸರ್ಸ್ ಮಿಟ್ಕಾನ್ ಇನ್ಫ್ರಾಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಮುಂಬೈನ ಶ್ರೀಕಾಂತ್ ಮಿಥೇಶ್ ಬಾಂಗ್ಡಿಯಾ ಮತ್ತು ಪವರ್ ಸ್ಮಾರ್ಟ್ ಮೀಡಿಯಾದ ಬೆಂಗಳೂರಿನ ಹೆಚ್ಚುವರಿ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್ ಶೆಟ್ಟಿ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ತಕ್ಷಣದಿಂದ ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ
ಈ ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಮಧ್ಯಂತರ ನಿರ್ದೇಶನ ತೆರವಿಗೆ ನಿರಾಕರಿಸಿತ್ತು. ಜೊತೆಗೆ “ಪರವಾನಗಿ ನವೀಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ಮೇಲ್ಮನವಿದಾರರ ಅಹವಾಲನ್ನು ಆಲಿಸಿ ಆರು ವಾರಗಳಲ್ಲಿ ಇತ್ಯರ್ಥಗೊಳಿಸಿಕೊಳ್ಳಬೇಕು” ಎಂದು ನ್ಯಾಯಪೀಠ ಗಡುವು ನೀಡಿದೆ.
ಈ ಆದೇಶವನ್ನು ಪ್ರಶ್ನಿಸಿ ಈಗ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಈ ಪ್ರಕರಣವನ್ನು ಆಲಿಸಿದ ಸುಪ್ರೀಂ ಕೋರ್ಟ್ ಪೀಠವು ಹೈಕೋರ್ಟ್‌ನ ಮಧ್ಯಂತರ ಆದೇಶಕ್ಕೆ ತಡೆ ನೀಡಿದೆ. ಹಾಗೆಯೇ ಇದು ‘ಸಂಪೂರ್ಣ ರಾಜಕೀಯ ದ್ವೇಷವಲ್ಲದೆ ಬೇರೇನೂ ಅಲ್ಲ’ ಎಂದಿದೆ.
ಇದನ್ನು ಓದಿದ್ದೀರಾ? ಪವರ್ ಟಿವಿ ಪ್ರಸಾರ ಸ್ಥಗಿತ 6 ವಾರ ಮುಂದುವರಿಕೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು “ನಾವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗೆ ಆದ್ಯತೆ ನೀಡುತ್ತೇವೆ. ಇದು ರಾಜಕೀಯ ದ್ವೇಷದ ಸರಳ ಪ್ರಕರಣದಂತೆ ಕಾಣುತ್ತಿದೆ. ಅರ್ಜಿದಾರರ ರಕ್ಷಣೆ ಮಾಡದಿದ್ದರೆ ಈ ನ್ಯಾಯಾಲಯವು ತನ್ನ ಕರ್ತವ್ಯದಲ್ಲಿ ವಿಫಲವಾಗುತ್ತದೆ” ಎಂದು ಹೇಳಿದೆ.
ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.