ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಕೇಂದ್ರದಲ್ಲಿ ಟ್ರಕ್-ಟೆಂಪೊ ಡಿಕ್ಕಿ ಹೊಡೆದು ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದ ಅಯ್ಯಪ್ಪ ದೇವಾಲಯ ಬಳಿ ಭಾನುವಾರ ರಾತ್ರಿ 7.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಟೆಂಪೊದಲ್ಲಿ 16 ಜನ ಪ್ರಯಾಣಿಸುತ್ತಿದ್ದು, ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಜಿಲ್ಲಾ ವ್ಯಾಪ್ತಿಯ ಸಿಡ್ಕೊ ಪ್ರದೇಶಕ್ಕೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದಿಂದ ಗಂಭೀರ ಗಾಯಗೊಂಡವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.