ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಸೋಮವಾರ 60 ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಜನರ ಮೇಲೆ ಅಪರಿಚಿತ ಬಂದೂಕುಧಾರಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ನಾಲ್ವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಇಂದು(ಜೂನ್ 30) ಮಧ್ಯಾಹ್ನದ ವೇಳೆಗೆ ಮೋಂಗ್‌ಜಾಂಗ್ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ನಿಲ್ಲದ ಸಂಘರ್ಷ
ಮೊಂಗ್‌ಜಾಂಗ್ ಚುರಾಚಂದ್‌ಪುರ ಪಟ್ಟಣದಿಂದ ಸುಮಾರು 7 ಕಿಲೋ ಮೀಟರ್ ದೂರದಲ್ಲಿರುವ ಪ್ರದೇಶವಾಗಿದೆ. ಆರೋಪಿಗಳು ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡು ಹಾರಿಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಮೃತರ ಗುರುತು ಇನ್ನೂ ದೃಢಪಟ್ಟಿಲ್ಲ ಎಂದು ವರದಿಯಾಗಿದೆ. ಸ್ಥಳದಲ್ಲಿ 12ಕ್ಕೂ ಅಧಿಕ ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಯಾವುದೇ ಸಂಘಟನೆಗಳು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಸದ್ಯ ಪೊಲೀಸರು ಮತ್ತು ಭದ್ರತಾ ಪಡೆಗಳು ಘಟನಾ ಸ್ಥಳಕ್ಕೆ ಧಾವಿಸಿದೆ.
2023ರ ಮೇ ತಿಂಗಳಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಜನಾಂಗದ ನಡುವೆ ಹಿಂಸಾಚಾರ ನಡೆಯುತ್ತಿದೆ. ಈವರೆಗೂ ಸುಮಾರು 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೂ ಹಿಂಸಾಚಾರವನ್ನು ಸಂಪೂರ್ಣವಾಗಿ ಹತೋಟಿಗೆ ತರುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.
