ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ (SP) ಮೈತ್ರಿಯಲ್ಲಿ ಸ್ಪರ್ಧೆಗಿಳಿದಿವೆ. ಮೈತ್ರಿಯ ಭಾಗವಾಗಿ ಸುಮಾರು 125 ರಿಂದ 150 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಎಸ್‌ಪಿ ಜೊತೆ ಸೀಟು ಹಂಚಿಕೆ ಮಾತುಕತೆಗಿಳಿದಿವೆ.
ಇತ್ತೀಚೆಗೆ, ಪ್ರಿಯಾಂಕಾ ಗಾಂಧಿ ಅವರು ಪಕ್ಷದ ರಾಜ್ಯ ನಾಯಕರೊಂದಿಗೆ ಸುಮಾರು ಮೂರು ಗಂಟೆಗಳ ಕಾಲ ಸಭೆ ನಡೆಸಿ, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆ ಮತ್ತು 2017ರ ವಿಧಾನಸಭಾ ಚುನಾವಣೆಯ ದತ್ತಾಂಶಗಳನ್ನು ಆಧರಿಸಿ ಕಾಂಗ್ರೆಸ್ ತನ್ನ ಕಾರ್ಯತಂತ್ರ ರೂಪಿಸುತ್ತಿದ್ದು, ನವೆಂಬರ್ ವೇಳೆಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸುವ ಗುರಿ ಹೊಂದಿದೆ.
ಪಕ್ಷದ ಆಂತರಿಕ ಮೂಲಗಳ ಪ್ರಕಾರ, ಕಾಂಗ್ರೆಸ್ ಸುಮಾರು 100 ಕ್ಷೇತ್ರಗಳನ್ನು ‘ಎ’ ವರ್ಗ, 40 ರಿಂದ 50 ಸ್ಥಾನಗಳನ್ನು ‘ಬಿ’ ವರ್ಗ ಹಾಗೂ 25 ರಿಂದ 35 ‘ಸಿ’ ವರ್ಗದ ಸೀಟುಗಳಾಗಿ ಪಟ್ಟಿ ಸಿದ್ಧಪಡಿಸಿದೆ. ಪ್ರತಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ವಿಧಾನಸಭಾ ಸ್ಥಾನದಲ್ಲಾದರೂ ಸ್ಪರ್ಧಿಸಬೇಕು ಎಂಬುದು ಪಕ್ಷದ ಪ್ರಮುಖ ಗುರಿಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ ಜೊತೆಗಿನ ಮೈತ್ರಿಯಲ್ಲಿ ಉತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್, ಮುಂದಿನ ಚುನಾವಣೆಯಲ್ಲಿಯೂ ಅಮೇಥಿ ಮತ್ತು ರಾಯ್‌ಬರೇಲಿ ಸೇರಿದಂತೆ ಪ್ರಮುಖ ನಾಯಕರು ಪ್ರಾತಿನಿಧ್ಯವಿರುವ ಕ್ಷೇತ್ರಗಳಲ್ಲಿ ತನ್ನ ಪ್ರಾಬಲ್ಯವನ್ನು ವೃದ್ಧಿಸಲು ಮುಂದಾಗಿದೆ. ಅಂತಹ ಕ್ಷೇತ್ರಗಳನ್ನು ತನ್ನ ಪಟ್ಟಿಯಲ್ಲಿ ಸೇರಿಸಿಕೊಂಡಿದೆ.
ಈ ಲೇಖನ ಓದಿದ್ದೀರಾ?: ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್ ಏನು ಹೇಳುತ್ತಾರೆ?
ಆದಾಗ್ಯೂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗೆಲುವಿನ ಮಾನದಂಡವನ್ನು ಆಧರಿಸಿ ಗರಿಷ್ಠ 60 ರಿಂದ 65 ಸ್ಥಾನಗಳನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟುಕೊಡಲು ಒಲವು ತೋರುತ್ತಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟು 403 ಸ್ಥಾನಗಳಿರುವ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಎಸ್‌ಪಿ ಸ್ವತಃ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿರುವುದರಿಂದ ಸೀಟು ಹಂಚಿಕೆ ಮಾತುಕತೆ ಕುತೂಹಲ ಮೂಡಿಸಿದೆ. ಮೈತ್ರಿ ಮಾತುಕತೆಗಳನ್ನು ಯಶಸ್ವಿಗೊಳಿಸಲು ಕಾಂಗ್ರೆಸ್ ಇತ್ತೀಚೆಗೆ ರಾಜ್ಯ ಘಟಕದಲ್ಲಿ ಸಂಘಟನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದೆ. ಅರಾಧನಾ ಮಿಶ್ರಾ ಅವರನ್ನು ರಾಜ್ಯ ಮುಖ್ಯಸ್ಥರನ್ನಾಗಿ ಮತ್ತು ಸಂಸದ ಇಮ್ರಾನ್ ಮಸೂದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಅಖಿಲೇಶ್ ಯಾದವ್ ಅವರೊಂದಿಗೆ ಉತ್ತಮ ಸಮನ್ವಯ ಸಾಧಿಸಲು ಮುಂದಾಗಿದೆ.




