ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವೆ ಸೋಮವಾರ ನವದೆಹಲಿಯಲ್ಲಿ ಮೊದಲ ಸುತ್ತಿನ ಸೀಟು ಹಂಚಿಕೆ ಮಾತುಕತೆ ನಡೆದಿದೆ. ಉಭಯ ಪಕ್ಷಗಳ ನಾಯಕರು ಈ ಸಭೆಯನ್ನು ಅತ್ಯಂತ ಸಕಾರಾತ್ಮಕ ಮತ್ತು ಸೌಹಾರ್ದಯುತ ಎಂದು ಬಣ್ಣಿಸಿದ್ದು, ಮುಂದಿನ 2 ರಿಂದ 4 ದಿನಗಳಲ್ಲಿ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಸಭೆಯು ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ನಾವು ಪರಸ್ಪರರ ನಿಲುವುಗಳನ್ನು ಆಲಿಸಿದ್ದೇವೆ. ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಈ ಮೈತ್ರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಅಧಿಕೃತವಾಗಿ ಮಾಹಿತಿ ನೀಡುತ್ತೇವೆ. ಮಂಗಳವಾರ ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಯುಪಿ ಚುನಾವಣೆ | ಬಿಜೆಪಿಯನ್ನು ಸೋಲಿಸಲು ಎಸ್‌ಪಿ-ಕಾಂಗ್ರೆಸ್ ಗಂಭೀರವಾಗಿಲ್ಲ: ಆಜಾದ್ ಆರೋಪ
ಇನ್ನು ಕಾಂಗ್ರೆಸ್‌ನ ಉತ್ತರ ಪ್ರದೇಶ ಉಸ್ತುವಾರಿ ರಾಜೇಂದ್ರ ಪಾಲ್ ಗೌತಮ್ ಮಾತನಾಡಿ, “ಎರಡೂ ಪಕ್ಷಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ. ಮಾತುಕತೆ ಬಹಳ ಚೆನ್ನಾಗಿ ಮತ್ತು ಸಕಾರಾತ್ಮಕವಾಗಿ ನಡೆದಿದೆ. ಗೌರವಯುತವಾಗಿ ಶೀಘ್ರದಲ್ಲೇ ಒಪ್ಪಂದಕ್ಕೆ ಬರಲಿದ್ದೇವೆ, ಇದು ಬಹುತೇಕ ಅಂತಿಮಗೊಂಡಿದೆ” ಎಂದಿದ್ದಾರೆ.
ಎಸ್‌ಪಿ ಮೈತ್ರಿ ಮಾತುಕತೆಗಾಗಿ ರಾಮ್ ಗೋಪಾಲ್ ಯಾದವ್, ಶ್ಯಾಮ್ ಲಾಲ್ ಪಾಲ್, ರಾಜೀವ್ ರೈ ಮತ್ತು ಇಕ್ರಾ ಚೌಧರಿ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ಸ್ಪಷ್ಟ ಉದ್ದೇಶದೊಂದಿಗೆ ಪ್ರತಿ ಕ್ಷೇತ್ರವನ್ನೂ ಪ್ರತ್ಯೇಕವಾಗಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎಸ್‌ಪಿ ಸಂಸದ ರಾಜೀವ್ ರೈ ಹೇಳಿದ್ದಾರೆ. ಆದರೆ, ಎಷ್ಟು ಸೀಟುಗಳ ಕುರಿತು ಚರ್ಚೆಯಾಗುತ್ತಿದೆ ಎಂಬ ಸಂಖ್ಯೆಯನ್ನು ಉಭಯ ಪಕ್ಷಗಳು ಇನ್ನೂ ಬಹಿರಂಗಪಡಿಸಿಲ್ಲ.
403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 2027ರ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಯು ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಎಸ್‌ಪಿ-ಕಾಂಗ್ರೆಸ್ ಮೈತ್ರಿಕೂಟವು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾರ್ಯತಂತ್ರ ರೂಪಿಸುತ್ತಿದೆ.
2022ರ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಎಸ್‌ಪಿ 111 ಮತ್ತು ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಗೆದ್ದಿದ್ದವು. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿ ಎಸ್‌ಪಿ 37 ಮತ್ತು ಕಾಂಗ್ರೆಸ್ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದವು. ಮತ್ತೊಂದೆಡೆ, ಈ ಮೈತ್ರಿಯ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್ ಮತ್ತು ಕೇಶವ್ ಪ್ರಸಾದ್ ಮೌರ್ಯ, “ಎಸ್‌ಪಿ-ಕಾಂಗ್ರೆಸ್ ಮೈತ್ರಿ ವಿಫಲವಾಗಲಿದೆ ಮತ್ತು 2027ರಲ್ಲಿ ಎನ್‌ಡಿಎ ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



