ಬಸ್ ಒಂದು ಆಳವಾದ ಕಮರಿಗೆ ಉರುಳಿ ಬಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
22 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ರಾಮನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ಅಲ್ಮೋರಾದ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ವಿನೀತ್ ಪಾಲ್ ಪಿಟಿಐಗೆ ತಿಳಿಸಿದ್ದಾರೆ. ಇನ್ನುಳಿದವವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬಸ್ ಪೌರಿಯಿಂದ ರಾಮನಗರಕ್ಕೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ. 200 ಮೀಟರ್ ಆಳದ ಕಮರಿಗೆ ಬಸ್ ಉರುಳಿದೆ. ಬಸ್‌ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕ್ ಕುಮಾರ್ ಪಾಂಡೆ ತಿಳಿಸಿದ್ದರು. ಆದರೆ ಬಸ್‌ನಲ್ಲಿ 55 ಮಂದಿ ಇದ್ದರು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಉತ್ತರಾಖಂಡ | ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವು
ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿ, ಸಂತಾಪ ವ್ಯಕ್ತಪಡಿಸಿದ್ದಾರೆ. “ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಸಂಭವಿಸಿದ ದುರದೃಷ್ಟಕರ ಬಸ್ ಅಪಘಾತದಲ್ಲಿ ಪ್ರಯಾಣಿಕರ ಸಾವು ನೋವಿನ ಸುದ್ದಿ ಕೇಳಿಬಂತು. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
“ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಕಾರ್ಯವನ್ನು ಕ್ಷಿಪ್ರವಾಗಿ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಅಗತ್ಯವಿದ್ದಲ್ಲಿ ಏರ್‌ಲಿಫ್ಟ್ ಮಾಡಲು ಸಹ ಸೂಚನೆಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.
