ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ನಿಧನರಾಗಿದ್ದಾರೆ. ಎದೆ ಸೋಂಕಿನಿಂದಾಗಿ ಅನಾರೋಗ್ಯ ಉಂಟಾಗಿ ಭೋಸ್ಲೆ ಶನಿವಾರ ಸಂಜೆ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಬಗ್ಗೆ ಜನೈ ಭೋಸ್ಲೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು. “ನನ್ನ ಅಜ್ಜಿ ಆಶಾ ಭೋಸ್ಲೆ ಅವರು ತೀವ್ರ ಅನಾರೋಗ್ಯ ಮತ್ತು ಎದೆ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ಗೌಪ್ಯತೆಯನ್ನು ಗೌರವಿಸುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ತಿಳಿಸಿದ್ದರು.
ಇದನ್ನು ಓದಿದ್ದೀರಾ? ಹಿರಿಯ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಇದೀಗ “ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು” ಎಂದು ಡಾ. ಪ್ರತೀತ್ ಸಮದಾನಿ ಪಿಟಿಐಗೆ ತಿಳಿಸಿದ್ದಾರೆ.
ಭಾರತೀಯ ಸಂಗೀತ ಲೋಕದ ದಂತಕಥೆ ಆಶಾ ಭೋಸ್ಲೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಕೇವಲ ಚಲನಚಿತ್ರ ಗೀತೆಗಳಲ್ಲದೆ, ಗಜಲ್, ಭಜನೆ, ಮತ್ತು ಪಾಪ್ ಸಂಗೀತದಲ್ಲೂ ಸಾಧನೆ ಮಾಡಿದ್ದಾರೆ. ಎರಡು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಏಳು ಬಾರಿ ‘ಅತ್ಯುತ್ತಮ ಹಿನ್ನೆಲೆ ಗಾಯಕಿ’ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಪಡೆದಿದ್ದಾರೆ ಮತ್ತು 2001ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಕೂಡ ಲಭಿಸಿದೆ.
ಚಲನಚಿತ್ರ ರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 2000ನೇ ಇಸವಿಯಲ್ಲಿ ಭೋಸ್ಲೆ ಅವರಿಗೆ ದೊರಕಿದೆ. 2008ರಲ್ಲಿ ಕೇಂದ್ರ ಸರ್ಕಾರವು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣ ನೀಡಿ ಗೌರವಿಸಿದೆ. ಹಾಗೆಯೇ ವಿಶ್ವದಾದ್ಯಂತ ಅತಿ ಹೆಚ್ಚು ಹಾಡುಗಳನ್ನು ಧ್ವನಿಮುದ್ರಿಸಿದ ಗಾಯಕಿ ಎಂದು 2011ರಲ್ಲಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಇವರ ಹೆಸರನ್ನು ದಾಖಲಿಸಿದೆ.




