ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಕಾರಣ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಘಟನೆಯು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದೆ.
ವೈರಲ್ ವಿಡಿಯೋದಲ್ಲಿ ನಾಲ್ವರು ಪುರುಷರ ಗುಂಪು ಮಹಿಳೆಯನ್ನು ಥಳಿಸಿದ್ದಾರೆ. ಒಬ್ಬ ವ್ಯಕ್ತಿ ಕೋಲಿನಿಂದ ಆಕೆಗೆ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಜೂನ್ 20ರಂದು ಮಹಿಳೆ ತನ್ನ ಪ್ರಿಯಕರನೊಂದಿಗೆ ಮನೆ ತೊರೆದು ಹೋಗಿದ್ದರು. ಆಕೆಯನ್ನು ಮರಳಿ ಕರೆತಂದು, ಥಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಮಹಿಳೆಯನ್ನು ಥಳಿಸಿದ ಪ್ರಮುಖ ಆರೋಪಿ ನೂರ್ ಸಿಂಗ್ ಭುರಿಯಾನನ್ನು ಬಂಧಿಸಲಾಗಿದೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತಂಡ ರಚಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ಅವರು ಶನಿವಾರ ಬೆಳಿಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, “ಧಾರ್ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಬಿಜೆಪಿ ಸರ್ಕಾರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ” ಎಂದಿದ್ದಾರೆ.
ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಟ್ಯಾಗ್ ಮಾಡಿರುವ ಅವರು, “ಘಟನೆಯನ್ನು ನಿಷ್ಪಕ್ಷಪಾತವಾಗಿ ಮತ್ತು ತ್ವರಿತವಾಗಿ ತನಿಖೆ ಮಾಡಿ, ಆದ್ಯತೆಯ ಮೇಲೆ ನ್ಯಾಯ ಕೊಡಿಸಬೇಕು. ಮಧ್ಯಪ್ರದೇಶದಲ್ಲಿ ಮಹಿಳೆಯರು ಏಕೆ ಹೆಚ್ಚು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ನಿಮ್ಮ ಸರ್ಕಾರ ಪದೇ ಪದೇ ವಿಫಲವಾಗುತ್ತಿರುವುದೇಕೆ” ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್ ಅವರು ಧಾರ್ (ST) ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.