ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವವರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆಯಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ, ಪೊಲೀಸರು 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ.
ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯಲ್ಲಿ ನ್ಯಾಯವಾದಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಈ ವೇಳೆ ಪೊಲೀಸರು ಬಸ್‌ಗಳನ್ನು ಬಳಸಿ ಪ್ರತಿಭಟನಾಕಾರರನ್ನು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ
ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು (ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠ) ಅತ್ಯಂತ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ನಾಗರಿಕರನ್ನು ಯಾವುದೇ ಕಾರಣಕ್ಕೂ ಕಾನೂನುಬಾಹಿರವಾಗಿ ಬಂಧಿಸಬಾರದು ಅಥವಾ ವಶಕ್ಕೆ ಪಡೆಯಬಾರದು ಎಂದು ತಿಳಿಸಿದೆ.
ಮೆಟ್ರೋ ಸಂಚಾರ, ಸಾರ್ವಜನಿಕ ಓಡಾಟ ಹಾಗೂ ಇಂಟರ್ನೆಟ್ ಸೇವೆಗಳ ಮೇಲೆ ವಿಧಿಸಲಾಗಿದ್ದ ಅನಗತ್ಯ ನಿರ್ಬಂಧಗಳನ್ನು ತಕ್ಷಣವೇ ಸಡಿಲಗೊಳಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳ ಹೊರತಾಗಿಯೂ ನಡೆಸಲಾದ ಈ ಸಾಮೂಹಿಕ ಬಂಧನಗಳು ಮತ್ತು ನಿರ್ಬಂಧಗಳ ಕುರಿತು ಸೂಕ್ತ ವಿವರಣೆ ನೀಡುವಂತೆ ಗೃಹ ಸಚಿವಾಲಯ ಹಾಗೂ ದೆಹಲಿ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದ ನಂತರವೂ 100ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್‌ಗಿಂತಲೂ ಪೊಲೀಸರೇ ಮಿಗಿಲಾದರೇ? ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕೋರ್ಟ್ ಆದೇಶವನ್ನೇ ಧಿಕ್ಕರಿಸಿ ಪ್ರತಿಭಟನಾಕಾರರನ್ನು, ವಕೀಲರನ್ನು ಎಳೆದೊಯ್ಯುತ್ತಿರುವುದು ಕಾನೂನು ವ್ಯವಸ್ಥೆಗೆ ಹಿಡಿದ ಕನ್ನಡಿ” ಎಂದು ಹಲವು ಬಳಕೆದಾರರು ಕಮೆಂಟ್ ಮಾಡಿದ್ದಾರೆ. ವಿಮಾನ ನಿಲ್ದಾಣಗಳು ಮತ್ತು ರಸ್ತೆಗಳಲ್ಲಿ ಬಲವಂತವಾಗಿ ಜನರನ್ನು ವಶಕ್ಕೆ ಪಡೆಯುತ್ತಿರುವ ವಿಡಿಯೋಗಳನ್ನು ಶೇರ್ ಮಾಡಿಕೊಂಡಿರುವ ನೆಟ್ಟಿಗರು ‘ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ ಎಲ್ಲಿ?’ ಎಂದು ಪ್ರಶ್ನಿಸುತ್ತಿದ್ದಾರೆ.





