ಕಣ್ಮರೆಯಾಗಿದ್ದ ಕುಕಿ ಸಮುದಾಯದ ಇಬ್ಬರು ಯುವಕರ ಮೃತದೇಹಗಳು ಭೀಕರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಸತತ ಎರಡನೇ ದಿನವೂ ಬಂದ್ ಮುಂದುವರೆದಿದೆ. ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ.
2023ರಿಂದಲೂ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಆರಂಭದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯದ ನಡುವೆ ಹಿಂಸಾಚಾರ ನಡೆದಿದ್ದು 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 2026ರಿಂದ ನಾಗಾ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಒಟ್ಟಿನಲ್ಲಿ ಮಣಿಪುರ ನಿರಂತರವಾಗಿ ಬೂದಿ ಮುಚ್ಚಿದ ಕೆಂಡದಂತಿದೆ.
ಇದನ್ನೂ ಓದಿ: ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ನಿಲ್ಲದ ಸಂಘರ್ಷ
ಕೆಲವು ದಿನಗಳ ಹಿಂದೆ ಕಣ್ಮರೆಯಾಗಿದ್ದ ಇಬ್ಬರು ಯುವಕರ ಮೃತದೇಹಗಳು ನೆರೆಯ ಸೇನಾಪತಿ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಪತ್ತೆಯಾಗಿದ್ದವು. ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ಈ ದೇಹಗಳು ಸಿಕ್ಕಿದ್ದು, ಯುವಕರನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೃತದೇಹಗಳನ್ನು ಕಾಂಗ್ಪೋಕ್ಪಿ ಜಿಲ್ಲಾ ಆಸ್ಪತ್ರೆಗೆ ತರಲಾಗುತ್ತಿದ್ದಂತೆ ಸಾರ್ವಜನಿಕರಲ್ಲಿ ಆಕ್ರೋಶ ಹೆಚ್ಚಾಗಿದೆ.
ಕೊಲೆಯನ್ನು ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣದ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಸಮುದಾಯಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಂದ್ ಅವಧಿಯನ್ನು ವಿಸ್ತರಿಸಿವೆ. ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಶಾಲಾ-ಕಾಲೇಜುಗಳು ಸಂಪೂರ್ಣವಾಗಿ ಬಾಗಿಲು ಮುಚ್ಚಿವೆ. ರಸ್ತೆ ಸಾರಿಗೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ವಾಹನ ಸಂಚಾರವಿಲ್ಲದೆ ಹೆದ್ದಾರಿಗಳು ನಿರ್ಜನಗೊಂಡಿವೆ.
ಯುವಕರ ಹತ್ಯೆಯಿಂದ ಕೆರಳಿದ ಪ್ರತಿಭಟನಾಕಾರರು ರಸ್ತೆಗಿಳಿದು ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯೂ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಪಡೆಗಳು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿದ್ದು, ಈ ಘರ್ಷಣೆಯಲ್ಲಿ ಒಬ್ಬ ಪ್ರತಿಭಟನಾಕಾರನ ತಲೆಗೆ ಗಾಯವಾಗಿದೆ.
ಸ್ಥಳೀಯ ಬುಡಕಟ್ಟು ಸಂಘಟನೆಗಳು ಈ ಭೀಕರ ಕೊಲೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಮತ್ತು ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿವೆ. ಘಟನೆಯನ್ನು ಖಂಡಿಸಿರುವ ಮಣಿಪುರದ ಉಪಮುಖ್ಯಮಂತ್ರಿ ನೇಮ್ಚಾ ಕಿಪ್ಗೆನ್ ಅವರು ಇದೊಂದು ‘ಹೀನ ಕೃತ್ಯ’ ಎಂದು ಬಣ್ಣಿಸಿದ್ದು, ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.




