“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿಜಯ್ ಶಾ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮಂಗಳವಾರ, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ವಿಜಯ್ ಶಾ, “ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ, ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು” ಎಂದು ಹೇಳಿದ್ದಾರೆ.
ಅವರ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧಕ್ಕೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ವಿಜಯ್ ಶಾ ಹೇಳಿಕೆಯನ್ನು ಖಂಡಿಸಿದ್ದಾರೆ.
ವಿಜಯ್ ಶಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಬಿಜೆಪಿ-ಆರ್ಎಸ್ಎಸ್ನ ಮನಃಸ್ಥಿತಿ ಎಂದಿಗೂ ಮಹಿಳಾ ವಿರೋಧಿಯಾಗಿದೆ ಇದೆ. ಭಯೋತ್ಪಾದಕರ ದಾಳಿಗೆ ಬಲಿಯಾದ ನೌಕಾ ಪಡೆ ಅಧಿಕಾರಿಯ ಪತ್ನಿಯನ್ನು ಬಿಜೆಪಿ ಮೊದಲ ಟ್ರೋಲ್ ಮಾಡಿದರು. ನಂತರ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರ ಮಗಳಿಗೆ ಮಾನಸಿಕ ಹಿಂಸೆ ನೀಡಿದರು. ಈಗ, ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಬಿಜೆಪಿಗರು ತುಚ್ಛವಾಗಿ ಮಾತಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿರುವ, ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಕುರಿತು ಅವಹೇಳನವಾಗಿ ಮಾತನಾಡಿರುವ ಸಚಿವನನ್ನು ಪ್ರಧಾನಿ ಮೋದಿ ಅವರು ತಕ್ಷಣವೇ ಅಮಾನತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.
ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಚಿವ ವಿಜಯ್ ಶಾ, “ನನ್ನ ಹೇಳಿಕೆಯನ್ನು ತಿರುಚಿ, ಹಂಚಿಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.