- ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ
- ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹೆಚ್ಚುವರಿ ಹಣ ಬಿಡುಗಡೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲ ಜಿಲ್ಲಾ ಪಮಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತಯಾರಾದ ನಿಯೋಜಿತ ರೂಪುರೇಷೆ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಸರ್ಕಾರದ ವತಿಯಿಂದ ₹5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
“ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿರುವ ಅವರು,”ಈ ಹಿಂದೆ ಒದಗಿಸಿದ್ದ 1 ಕೋಟಿ ರೂ. ನೀಡಲಾಗಿತ್ತು. ಈಗ ಒಟ್ಟು ₹6.14 ಕೋಟಿ ಹಣ ನೀಡಿದಂತಾಗಿದೆ” ಎಂದು ಹೇಳಿದ್ದಾರೆ.
“ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ” ಎಂದಿದ್ದಾರೆ.
“ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿ ಎರಡು ಸಭೆಗಳನ್ನು ನಡೆಸಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸ್ಪಷ್ಟ ಚಿತ್ರಣ ರೂಪಿಸಿದೆ. ರಾಜ್ಯದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತೇವೆ ಎಂದು ಶಾಸನ ಸಭೆಯಲ್ಲೂ ಸರ್ಕಾರ ಪುನರುಚ್ಚರಿಸಿದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಿಂದುಳಿದ ಸಮುದಾಯಗಳಿಗೆ ಶಾಸನಸಭೆಯಲ್ಲೂ ಮೀಸಲಾತಿ ದೊರೆಯಬೇಕು: ನಿವೃತ್ತ ನ್ಯಾ. ನಾಗಮೋಹನ್ ದಾಸ್
“ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಗಳಲ್ಲಿ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನ ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರನ್ನು ಜನರಿಗೆ ಸರಬರಾಜು ಮಾಡಲೂ ಹಣ ಒದಗಿಸಲಾಗಿದೆ” ಎಂದು ವಿವರಿಸಿದ್ದಾರೆ.
ಒ”ಟ್ಟು ಟ್ಯಾಂಕರ್ ನೀರು ಪೂರೈಕೆಗೆ ₹4.21 ಕೋಟಿ ಹಣವನ್ನ ನೀಡಲಾಗಿದ್ದು, ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯಲು 93 ಲಕ್ಷ ಹಣವನ್ನ ನೀಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುನ್ನಚ್ಚರಿಕೆಯಿಂದ ಸರ್ಕಾರ ಸನ್ನದ್ಧವಾಗಿದೆ” ಎಂದು ಹೇಳಿದ್ದಾರೆ.