ರಾಜ್ಯದಲ್ಲಿ 1,600ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ. ಆ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಅನುಮತಿ ಪಡೆದಿರುವ ಆಡಳಿತ ಮಂಡಳಿಗಳೇ ಬೇರೆ, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವವರೇ ಬೇರೆ. ಅಲ್ಲದೆ, ಅನುಮತಿ ಪಡೆಯುವಾಗ ಉಲ್ಲೇಖಿಸಿರುವ ವಿಳಾಸಗಳೂ ಬೇರೆ-ಬೇರೆ ಇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಅನುಮತಿ ಪಡೆಯುವ ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ” ಎಂದು ಹೇಳಿದ್ದಾರೆ.
“ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಶಿಕ್ಷಣಿಕ ವರ್ಷವು ಅರ್ಧ ಮುಗಿದಿರುವುದರಿಂದ ಆ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ತಪ್ಪು ಮಾಡಿರುವ ಸಂಸ್ಥೆಗಳಿಗೆ ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಮಯ ನೀಡಲಾಗಿದೆ. ಕ್ರಮ ಕೈಕೊಳ್ಳುವಾಗ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ” ಎಂದು ಹೇಳಿದ್ದಾರೆ.
ಶಾಲಾ ಬ್ಯಾಗ್‌ಗಳ ತೂಕ ಕಡಿಮೆ ಮಾಡುವ ಬಗ್ಗೆ ಮಾತನಾಡಿದ ಅವರು, “ಪ್ರಸ್ತುತ ತೂಕಕ್ಕೆ ಹೋಲಿಸಿದರೆ 1/3ರಷ್ಟು ತೂಕವನ್ನು ಕಡಿಮೆ ಮಾಡಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳು 10 ಮತ್ತು 12ನೇ ತರಗತಿಗಳಲ್ಲಿ ಸಾರ್ವಜನಿಕ ಪರೀಕ್ಷೆಗಳಿಗೆ ಸಿದ್ಧರಾಗಲು ಸಹಾಯ ಮಾಡುತ್ತದೆ” ಎಂದಿದ್ದಾರೆ.
ರಾಜ್ಯದಲ್ಲಿ 53,000 ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಹಂತ-ಹಂತವಾಗಿ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ” ಎಂದು ಅವರು ಹೇಳಿದ್ದಾರೆ.