ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ.
ಅಕ್ರಮ ಹಿನ್ನಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಈಗ ಗೃಹ ಇಲಾಖೆ ಸೋಮವಾರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ 545 ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದು ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಮುಖಂಡರು ಸೇರಿ ಸಾಕಷ್ಟು ಜನರನ್ನು ಬಂಧಿಸಲಾಗಿತ್ತು.
ಹೈಕೋರ್ಟ್ ನೀಡಿದ್ದ ಸೂಚನೆ ಮೇರೆಗೆ 2024 ಜನವರಿ 23ರಂದು ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಕೆಪಿಎಸ್ಸಿ ಬದಲು ಮೊದಲ ಬಾರಿಗೆ ಕೆಇಎ ಮೂಲಕ ಪರೀಕ್ಷೆ ನಡೆಸಲಾಗಿತ್ತು. ಬಳಿಕ 2021ರ ಅಕ್ಟೋಬರ್ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಅಕ್ರಮ ಕೇಳಿಬಂದಿತ್ತು. ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಆರೋಪ ಹಿನ್ನೆಲೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ಮಧ್ಯಂತರ ವರದಿ ಆಧರಿಸಿ ಲಿಖಿತ ಪರೀಕ್ಷೆ ರದ್ದು ಮಾಡಲಾಗಿತ್ತು.
ಮರು ಪರೀಕ್ಷೆಗೆ 2022 ಏಪ್ರಿಲ್ನಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆಹೋಗಿದ್ದರು. ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಮರು ಪರೀಕ್ಷೆಗೆ ಸೂಚಿಸಿತ್ತು.