87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, “ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸಿ, ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ಪಡೆಯಿರಿ” ಎಂದರು.
“ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಿ” ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
“ಕನ್ನಡರಥ ಜಾಥಾ, 87 ಜನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೇರಿದಂತೆ ಮೂರು ದಿನಗಳ ಕಾಲ ಕನ್ನಡ ವಿಚಾರಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಭೆಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು- Scroll.in ಗೆ ಅಭಿನಂದನೆ!
ಇದೇ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ.ಗಳ ಅನುದಾನ ಒದಗಿಸಲು ಪರಿಷತ್ ಅಧ್ಯಕ್ಷರು ಮನವಿ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಚಲುವನಾರಾಯಣಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಉಪಸ್ಥಿತರಿದ್ದರು.