ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಈ ನಡುವೆ, ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಹೀಗಾಗಿ, ರಾಜ್ಯದ ಸಚಿವರೊಂದಿಗೆ ಸಭೆ ನಡೆಸಿರುವ ರಾಹುಲ್ ಗಾಂಧಿ, ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ ಕ್ಷೇತ್ರಗಳ ಉಸ್ತುವಾರಿ ನೀಡಲಾಗಿತ್ತು. ಹಲವು ಕ್ಷೇತ್ರಗಳಲ್ಲಿ ಪಕ್ಷವು ಕಡಿಮೆ ಮತಗಳನ್ನು ಗಳಿಸಿದೆ. ಈ ಬಗ್ಗೆಯೂ ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
“ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಅವರನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿತ್ತು. ಆದರೆ, ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕು. ಮುಂದಿನ ದಿನದಲ್ಲಿ ಹೀಗಾಗದಂತೆ ನೋಡಿಕೊಳ್ಳಿ” ಎಂದು ರಾಹುಲ್ ಎಚ್ಚರಿಕೆ ನೀಡಿದ್ದಾರೆ.
“ಸಚಿವರು ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಬರದಂತೆ ಕೆಲಸ ಮಾಡಬೇಕು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸಗಳು ಆಗಬಾರದು” ಎಂದು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.