ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಎಫ್‌ಐಆರ್ ದಾಖಲಾಗಿದೆ.
ಹೋರಾಟಗಾರ್ತಿ, ಜೆಡಿಎಸ್ ಮುಖಂಡೆ ನಜ್ಮಾ ನಝೀರ್ ಚಿಕ್ಕನೇರಳೆ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298 ಮತ್ತು 12ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶ್ರೀರಂಗಪಟ್ಟಣದಲ್ಲಿ ಭಾನುವಾರ ನಡೆದ ಹನುಮ ಜಯಂತಿ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದರು.
ಪ್ರಭಾಕರ ಭಟ್ ವಿರುದ್ಧ ದೂರು ನೀಡಿರುವ ನಜ್ಮಾ, “ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನು ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿ ಸಾವು ನೋವುಗಳನ್ನು ಪ್ರಚೋದಿಸಿದ ವೃತ್ತಿಪರ ಕ್ರಿಮಿನಲ್ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ಕೈಗೊಳ್ಳುವಂತೆ” ಒತ್ತಾಯಿಸಿದ್ದಾರೆ.