- ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ
- ಜಲಜೀವನ್ ಮಿಷನ್ ಅಧಿಕಾರಿಗಳ ಜತೆ ಸಿಎಂ ಸಭೆ
ರಾಜ್ಯದ ಹಲವು ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಜೀವನ್ ಮಿಷನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು 8 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಮಸ್ಯೆಯ ಬಗ್ಗೆ ಮಾಹಿತಿ ಕಲೆ ಹಾಕಿದರು.
ಮಳೆಗಾಲ ಆರಂಭದಲ್ಲೂ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಎದುರಾಗಲು ಇರುವ ಕಾರಣಗಳನ್ನು ತಿಳಿದುಕೊಂಡ ಸಿಎಂ ಅಗತ್ಯ ಕ್ರಮ ಜರುಗಿಸುವಂತೆ ಡಿಸಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಶುದ್ಧ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಲು ಸೂಚನೆಗಳನ್ನು ನೀಡಿದರು.
ಈ ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಹಾಗೂ ನಗರಾಭಿವೃದಿ ಸಚಿವರು ಉಪಸ್ಥಿತರಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಪುನಶ್ವೇತನಕ್ಕಾಗಿ ಕಾದು ನಿಂತಿರುವ ಇಂದಿರಾ ಕ್ಯಾಂಟೀನ್ಗಳ ಪುನಾರಂಭದ ಬಗ್ಗೆ ಸಿಎಂ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ?:ಬಿಜೆಪಿ ಸರ್ಕಾರದ ಶಿಫಾರಸ್ಸಿನಂತೆ ವಿದ್ಯುತ್ ದರ ಹೆಚ್ಚಳವಾಗಿದೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮಧ್ಯಾಹ್ನ ಒಂದು ಗಂಟೆಗೆ ನಡೆಯಲಿರುವ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ಗಳ ಪುನಾರಂಭ ಹಾಗೂ ಖರ್ಚುವೆಚ್ಚದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಉಳಿದಂತೆ ಸಿದ್ದರಾಮಯ್ಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಇನ್ನು ಈ ಸಭೆಗೂ ಮುನ್ನ ಎರಡನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್, ಇಂದು ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಈ ವೇಳೆ ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.