ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು (ಬುಧವಾರ) ಅವರು ಕೋಲಾರ ಜಿಲ್ಲೆಯಲ್ಲಿ ಶ್ರೀನಿವಾಸಪಪುರಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು. ಆದರೆ, ಮಂಗಳವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶ್ರೀನಿವಾರಪುರ ತಾಲೂಕಿನಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ಅಧಿಕಾರಿಗಳು ರೈತರ ಬೆಳೆ ನಾಶಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಹೀಗಾಗಿ, ಸ್ಥಳಕ್ಕೆ ಭೇಟಿ ನೀಡಿ, ರೈತರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲು ಕುಮಾರಸ್ವಾಮಿ ಯೋಜಿಸಿದ್ದರು ಎಂದು ಹೇಳಲಾಗಿದೆ.
ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ, ಚಿಂತಗುಂಡ, ಕೇತಗಾನಹಳ್ಳಿಗಳಲ್ಲಿ ಭೂ ಒತ್ತುವರಿಯನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ನ್ಯಾಯಾಲಯ ಅನುಮತಿ ನೀಡಿತ್ತು. ಹೀಗಾಗಿ, ಕಾರ್ಯಾಚರಣೆ ಆರಂಭಿಸಿದ್ದ ಅಧಿಕಾರಿಗಳು ಸುಮಾರು 560 ಎಕರೆ ಒತ್ತವರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಾಚರಣೆ ವೇಳೆ ರೈತರು ಬೆಳೆಸಿದ್ದ ಮಾವಿನ ಮರಗಳು, ತರಕಾರಿ ಬೆಳೆ ಹಾಗೂ ಕೋಳಿ ಫಾರಂಗಳನ್ನು ನಾಶ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.